
ಬೆಂಗಳೂರು: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ‘ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ’ (ಸಿಎಂಐಡಿಪಿ) ಅಡಿ ಶಾಸಕರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗಿದೆ’ ಎಂದು ಆಕ್ಷೇಪಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಆರ್ಥಿಕ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
‘ಸಿಎಂಐಡಿಪಿ ಯೋಜನೆಯಡಿ ಆಡಳಿತ ಪಕ್ಷದ ಶಾಸಕರಿಗೆ ತಲಾ ₹50 ಕೋಟಿ ಹಾಗೂ ವಿರೋಧ ಪಕ್ಷದ ಶಾಸಕರಿಗೆ ತಲಾ ₹25 ಕೋಟಿ ಅನುದಾನ ಹಂಚಿಕೆ ಮಾಡಿ ತಾರತಮ್ಯ ಎಸಗಲಾಗಿದೆ’ ಎಂದು ಆರೋಪಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ಶಿವಯ್ಯ ಗುಡಗುಂಟಿ ಸಲ್ಲಿಸಿರುವ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು 2026ರ ಜನವರಿ 31ಕ್ಕೆ ಮುಂದೂಡಿತು.
ಆಕ್ಷೇಪವೇನು?: ‘ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷದ ಶಾಸಕರು ಹಾಗೂ ವಿರೋಧ ಪಕ್ಷದ ಶಾಸಕರಿಗೆ ತಾರತಮ್ಯ ಮಾಡುತ್ತಿರುವ ಸರ್ಕಾರದ ಈ ಧೋರಣೆ ಸಂವಿಧಾನದ 14ನೇ ವಿಧಿ ಅಡಿಯಲ್ಲಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕುಗಳು ಹಾಗೂ 38 ಮತ್ತು 39ನೇ ವಿಧಿ ಅಡಿಯಲ್ಲಿನ ರಾಜ್ಯ ನೀತಿ ನಿರ್ದೇಶಕ ತತ್ವಗಳ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.