ADVERTISEMENT

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ತನಿಖೆಗೆ ಆಯೋಗ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 23:12 IST
Last Updated 18 ಜನವರಿ 2023, 23:12 IST
ಬಾಗಲಕೋಟೆಯಲ್ಲಿ ಬುಧವಾರ ಕಾಂಗ್ರೆಸ್‌ ಪ್ರಜಾಧ್ವನಿ ಬಸ್ ಯಾತ್ರೆ ಬಹಿರಂಗ ಸಭೆಯಲ್ಲಿ ಭಾಗವಹಿಸಿದ್ದ ಜನಸ್ತೋಮ
ಬಾಗಲಕೋಟೆಯಲ್ಲಿ ಬುಧವಾರ ಕಾಂಗ್ರೆಸ್‌ ಪ್ರಜಾಧ್ವನಿ ಬಸ್ ಯಾತ್ರೆ ಬಹಿರಂಗ ಸಭೆಯಲ್ಲಿ ಭಾಗವಹಿಸಿದ್ದ ಜನಸ್ತೋಮ   

ಬಾಗಲಕೋಟೆ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರ ಹಗರಣಗಳ ತನಿಖೆಗೆ ಆಯೋಗ ರಚಿಸಲಾಗುವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಪ್ರಜಾಧ್ವನಿ ಬಸ್‌ ಯಾತ್ರೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿಗೆ ಶೇ 40ರಷ್ಟು ಕಮಿಷನ್‌ ಪಡೆದಿರುವುದು, ಪಿಎಸ್‌ಐ, ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್ ನೇಮಕಾತಿ ಸೇರಿದಂತೆ ಹಲವು ಹಗರಣಗಳ ತನಿಖೆ ನಡೆಸಿ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.

ಸ್ಯಾಂಟ್ರೊ ರವಿ ಪ್ರಕರಣ ಮುಚ್ಚಿ ಹಾಕುವ ಯತ್ನ: ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಸ್ಯಾಂಟ್ರೊ‌ ರವಿ ನಟೋರಿಯಸ್ ಕ್ರಿಮಿನಲ್ ಆಗಿದ್ದು, ಬಿಜೆಪಿ ಸಚಿವರ ಹುಳುಕು ಬಯಲಾಗಬಾರದು ಎಂದು ಪ್ರಕರಣ ಮುಚ್ಚಿ ಹಾಕಲಾಗುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ಪೊಲೀಸರು ರವಿಯನ್ನು ತಮ್ಮ ವಶಕ್ಕೆ ಕೇಳದಿರುವುದು ಪ್ರಕರಣ ಮುಚ್ಚಲು ಯತ್ನಿಸುತ್ತಿರುವಂತಿದೆ’ ಎಂದು ಟೀಕಿಸಿದರು.

ಒಂದೇ ಕ್ಷೇತ್ರದಿಂದ ಸ್ಪರ್ಧೆ: ‘ಒಂದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಎಂಟು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದೇನೆ. ಕ್ಷೇತ್ರ ವಿಂಗಡಣೆಯಲ್ಲಿ ‌ಸ್ವಂತ ಊರು ವರುಣಾಕ್ಕೆ ಸೇರಿದ್ದರಿಂದ ಅಲ್ಲಿ ಎರಡು ಬಾರಿ ಸ್ಪರ್ಧಿಸಿದೆ. ಕಳೆದ‌ ಬಾರಿ ಬಾದಾಮಿಯಿಂದ ಕಣಕ್ಕಿಳಿದೆ. ಒಂದೇ ಕ್ಷೇತ್ರದಿಂದ ಸ್ಪರ್ಧಿಸಿದರೆ ಮಾತ್ರ ನಾಯಕರಾ’ ಎಂದು ಪ್ರಶ್ನಿಸಿದರು.

ಈ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ‘ಒಂದು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.