ADVERTISEMENT

ಗಣಪತಿ ಮೆರವಣಿಗೆ ದುರಂತಕ್ಕೆ ಕೋಮುಬಣ್ಣ ನೀಡಿದರೆ, ಕಠಿಣ ಕ್ರಮ: ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 7:59 IST
Last Updated 13 ಸೆಪ್ಟೆಂಬರ್ 2025, 7:59 IST
<div class="paragraphs"><p> ಕೃಷ್ಣ ಬೈರೇಗೌಡ</p></div>

ಕೃಷ್ಣ ಬೈರೇಗೌಡ

   

ಹಾಸನ: ಟ್ರಕ್‌ ಚಾಲಕ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಕಂಡುಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಇಂತಹ ದುರ್ವರ್ತನೆಯೂ ಕಾನೂನು ರೀತಿಯ ಅಪರಾಧವಾಗಿದ್ದು, ಅಂಥವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರದೃಷ್ಟಕರ. ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನರಿಂದ ತೀವ್ರ ಥಳಿತಕ್ಕೊಳಪಟ್ಟವನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ವಿರುದ್ಧ ಎಲ್ಲ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೀಗಾಗಿ ರಸ್ತೆಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಹಾಗೂ ಸಂಸದ ಶ್ರೇಯಸ್ ಎಂ. ಪಟೇಲ್‌ ಪತ್ರ ಬರೆಯುತ್ತೇವೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ. ಈ ಬಗ್ಗೆಯೂ ಪತ್ರದಲ್ಲಿ ಒತ್ತಾಯಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.