ADVERTISEMENT

ನಿಯಮ ಮೀರಿ ಕಡತ ವಿಲೇವಾರಿಗೆ ಒತ್ತಡ: ಡಿಸಿ ವಿರುದ್ಧ ದೂರು

ರಾಜಕೀಯ ಕೈಗೊಂಬೆಯಂತೆ ವರ್ತನೆಯ ಆರೋಪ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 21:03 IST
Last Updated 6 ಮಾರ್ಚ್ 2023, 21:03 IST

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಅವರು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕಡತಗಳನ್ನು ನಿಯಮ ಮೀರಿ ವಿಲೇ ಮಾಡಲು ಒತ್ತಡ ಹೇರುತ್ತಿದ್ದಾರೆ’ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಜಿಲ್ಲೆಯ ಕೆಲ ಅಧಿಕಾರಿಗಳು ಹಾಗೂ ಕೆಲ ಸಿಬ್ಬಂದಿ ದೂರು ನೀಡಿದ್ದಾರೆ.

ಈ ದೂರಿನ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆ ಸೂಚಿಸಿದೆ.

ದೂರಿನಲ್ಲಿ ಏನಿದೆ: ‘ರವಿಕುಮಾರ್‌ ಅವರು ರಾಜಕೀಯ ವ್ಯಕ್ತಿಗಳ ಪ್ರಭಾವಕ್ಕೆ ಒಳಗಾಗಿ ಪ್ರಮುಖ ಕಡತಗಳನ್ನು ನಿಯಮ ಮೀರಿ ವಿಲೇವಾರಿ ಮಾಡಲು ಒತ್ತಡ ಹೇರುತ್ತಿದ್ದಾರೆ. ಅರ್ಜಿದಾರರು, ಸಂಘ ಸಂಸ್ಥೆಗಳು ನೀಡಿದ ಅರ್ಜಿಗಳನ್ನು ವಿಲೇವಾರಿ ಮಾಡುವಾಗ ಅಧೀನ ಕಚೇರಿಗಳಿಂದ ಯಾವುದೇ ವರದಿ ಪಡೆಯದೇ ಅರ್ಜಿದಾರರ ಪರವಾಗಿ ಆದೇಶ ಮಾಡುತ್ತಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ADVERTISEMENT

‘ಜಿಲ್ಲಾಧಿಕಾರಿ ನ್ಯಾಯಾಲಯದ ಪ್ರಕರಣಗಳಲ್ಲಿ ರಾಜಕೀಯ ವ್ಯಕ್ತಿಗಳ ಪ್ರಭಾವಕ್ಕೊಳಗಾಗಿ ಏಕಪಕ್ಷೀಯವಾಗಿ ಆದೇಶ ಹೊರಡಿಸುತ್ತಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಸಣ್ಣ ಪುಟ್ಟ ವಿಷಯಗಳಿಗೂ ನೋಟಿಸ್ ನೀಡುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ’ ಎಂದೂ ಆರೋಪಿಸಲಾಗಿದೆ.

‘ಗುಪ್ತಚರ ಇಲಾಖೆಯಿಂದ ಹೆಚ್ಚಿನ ಮಾಹಿತಿ ಪಡೆದು, ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಫೆ. 24ರಂದು ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌, ‘ಸಾರ್ವಜನಿಕ ಕೆಲಸಗಳನ್ನು ತ್ವರಿತವಾಗಿ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕಾಗುತ್ತದೆ. ಈ ರೀತಿ ಆರೋಪ ಏಕೆ ಮಾಡಿದ್ದಾರೊ ಅರ್ಥವಾಗಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.