ADVERTISEMENT

ರಮೇಶ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ದೂರು

ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುತ್ತಿಲ್ಲ– ಆರೋಪ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 16:07 IST
Last Updated 10 ಏಪ್ರಿಲ್ 2019, 16:07 IST
   

ಬೆಳಗಾವಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗಳ ಪರ ಶಾಸಕ ರಮೇಶ ಜಾರಕಿಹೊಳಿ ಪ್ರಚಾರ ನಡೆಸುತ್ತಿಲ್ಲವೆಂದು ಮುಖಂಡರು ಕೆಪಿಸಿಸಿಗೆ ದೂರು ಸಲ್ಲಿಸಿದ್ದಾರೆ.

ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಡಾ.ವಿ.ಎಸ್‌. ಸಾಧುನವರ ಹಾಗೂ ಚಿಕ್ಕೋಡಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಕಾಶ ಹುಕ್ಕೇರಿ ಅವರು ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಅವರ ಅಣ್ಣ ಶಾಸಕ ರಮೇಶ ಜಾರಕಿಹೊಳಿ ಮಾತ್ರ ಕಾಣಿಸಿಕೊಂಡಿಲ್ಲ. ನಾಮಪತ್ರ ಸಲ್ಲಿಸುವ ವೇಳೆಯೂ ಉಪಸ್ಥಿತರಿರಲಿಲ್ಲ.

ಬಿಜೆಪಿ ಪರ ಕೆಲಸ– ಗುಮಾನಿ:ಕಳೆದ ವರ್ಷ ಬೆಳಗಾವಿ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯ ನಂತರ ನಡೆದ ಬೆಳವಣಿಗೆ ಹಾಗೂ ಸಚಿವ ಸ್ಥಾನ ಕೈತಪ್ಪಿ ಹೋಗಿದ್ದರಿಂದ ಬೇಸತ್ತ ರಮೇಶ ಅವರು ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿದ್ದರು. ಲೋಕಸಭಾ ಚುನಾವಣೆ ಘೋಷಣೆಯಾದ ನಂತರವೂ ಪಕ್ಷದ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳಲಿಲ್ಲ.

ADVERTISEMENT

‘ರಮೇಶ ಜಾರಕಿಹೊಳಿ ಅವರು ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿಲ್ಲ. ಒಮ್ಮೆಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರು ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ ಎನ್ನುವ ಶಂಕೆ ನಮಗಿದೆ. ಅವರ ನಡವಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡಿದ್ದೇವೆ’ ಎಂದು ಹೆಸರು ಹೇಳಲು ಇಚ್ಛಿಸದ ಪಕ್ಷದ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.