ಸಿ.ಜೆ.ರಾಯ್
ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ನಿಗೂಢವಾಗಿದ್ದು, ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಲಾಗಿದೆ.
ಗ್ರೂಪ್‌ನ ಕೇರಳ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ಜೋಸೆಫ್ ಅವರ ದೂರು ಆಧರಿಸಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 194/3(4) ಅಡಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆಗೆ ಪಶ್ಚಿಮ ವಲಯದ ಜಂಟಿ ಪೊಲೀಸ್ ಕಮಿಷನರ್ ಸಿ.ವಂಶಿಕೃಷ್ಣ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಶನಿವಾರ ಆದೇಶಿಸಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಅವರು ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
‘ತನಿಖೆಗೆ ಅವಶ್ಯವಿರುವ ಹೆಚ್ಚುವರಿ ಅಧಿಕಾರಿಗಳು, ಸಂಪನ್ಮೂಲಗಳನ್ನು ತಂಡಕ್ಕೆ ಸೇರಿಸಿಕೊಳ್ಳುವ ಅಧಿಕಾರವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನೀಡಲಾಗಿದೆ. ಕಾನೂನುಬದ್ಧ ಹಾಗೂ ಪರಿಣಾಮಕಾರಿಯಾಗಿ ತನಿಖೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ’ ಎಂದು ಸೀಮಾಂತ್‌ಕುಮಾರ್ ಸಿಂಗ್ ಹೇಳಿದರು.
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ‘ಕಾನ್ಫಿಡೆಂಟ್ ಗ್ರೂಪ್’ನ ಕಚೇರಿಯಲ್ಲಿ ಇರುವ ಸಂದರ್ಭದಲ್ಲಿಯೇ ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿಗೆ ತಮ್ಮ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೇರಳ, ಕರ್ನಾಟಕ, ದುಬೈನಲ್ಲಿ ರಾಯ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು.
ರಾಯ್ ಅವರ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಡೈರಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅದರ ವರದಿ ನಿರೀಕ್ಷೆಯಲ್ಲಿದ್ದಾರೆ.
ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ (ಪೂರ್ವ ವಿಭಾಗ)
ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಾಕೇ
ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್
ಹಲಸೂರು ಉಪ ವಿಭಾಗದ ಎಸಿಪಿ ಸುಧೀರ್
ಸಿಸಿಆರ್‌ಬಿ ಎಸಿಪಿ ರಾಮಚಂದ್ರ
ಅಶೋಕನಗರ ಇನ್‌ಸ್ಪೆಕ್ಟರ್ ಕೆ.ಬಿ.ರವಿ
ಸ್ಥಳ ಮಹಜರು; ಸಿಬ್ಬಂದಿ ವಿಚಾರಣೆ
ಪ್ರಕರಣವು ಎಸ್‌ಐಟಿಗೆ ವರ್ಗಾವಣೆಯಾದ ಬೆನ್ನಲ್ಲೇ ತನಿಖೆ ಮತ್ತಷ್ಟು ಚುರುಕು ಪಡೆದಿದೆ. ಎಸ್‌ಐಟಿ ಅಧಿಕಾರಿಗಳು ಶನಿವಾರ ರಾತ್ರಿಯೇ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ‘ಕಾನ್ಫಿಡೆಂಟ್ ಗ್ರೂಪ್’ನ ಕಚೇರಿಗೆ ಭೇಟಿ ನೀಡಿ ಮಹಜರು ನಡೆಸಿದರು. ಅಲ್ಲದೇ ಕಚೇರಿ ಸಿಬ್ಬಂದಿಯಿಂದಲೂ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ.
ತನಿಖೆ ಬಳಿಕ ರಾಯ್ ಆತ್ಮಹತ್ಯೆಗೆ ಕಾರಣ ಗೊತ್ತಾಗಲಿದೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕೇ ಬೇಡವೇ ಎಂಬುದನ್ನು ಎಸ್‌ಐಟಿ ಅಧಿಕಾರಿಗಳು ನಿರ್ಧರಿಸಲಿದ್ದಾರೆಜಿ. ಪರಮೇಶ್ವರ ಗೃಹ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.