ADVERTISEMENT

ಡಿಸೆಂಬರ್‌ನಲ್ಲಿ ಎಸ್‌.ಸಿ, ಎಸ್‌.ಟಿ ಸಮಾವೇಶಕ್ಕೆ ಕಾಂಗ್ರೆಸ್‌ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2022, 15:16 IST
Last Updated 20 ನವೆಂಬರ್ 2022, 15:16 IST
   

ಬೆಂಗಳೂರು: ಡಿಸೆಂಬರ್‌ ತಿಂಗಳಿನಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೂ ಮುನ್ನ ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌.ಟಿ) ಎರಡು ಸಮಾವೇಶಗಳನ್ನು ಆಯೋಜಿಸಲು ಭಾನುವಾರ ನಡೆದ ಕಾಂಗ್ರೆಸ್‌ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯುವ ಉದ್ದೇಶದಿಂದ ತಮ್ಮ ಪಕ್ಷವೂ ಬೃಹತ್‌ ಸಮಾವೇಶ ಆಯೋಜಿಸಬೇಕು ಎಂಬ ಪ್ರಸ್ತಾವವನ್ನು ಶಾಸಕ ಜಿ. ಪರಮೇಶ್ವರ ಅವರು ಕಾಂಗ್ರೆಸ್‌ ನಾಯಕರ ಮುಂದಿಟ್ಟಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ, ಪರಮೇಶ್ವರ, ಮುಖಂಡರಾದ ಕೆ.ಎಚ್‌. ಮುನಿಯಪ್ಪ ಮತ್ತು ಡಾ.ಎಚ್‌.ಸಿ. ಮಹದೇವಪ್ಪ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.

‘ಎಸ್‌.ಸಿ ಮತ್ತು ಎಸ್‌.ಟಿ ಎರಡೂ ಸಮುದಾಯಗಳನ್ನು ಸೇರಿಸಿ ‘ಐಕ್ಯತಾ ಸಮಾವೇಶ’ದ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ದಕ್ಷಿಣ ಕರ್ನಾಟಕದಲ್ಲಿ ಒಂದು ಹಾಗೂ ಉತ್ತರ ಕರ್ನಾಟಕದಲ್ಲಿ ಒಂದು ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯದ ಪ್ರಮುಖ ನಾಯಕರಿಗೆ ಆಹ್ವಾನ ನೀಡುವ ನಿರ್ಣಯವನ್ನೂ ಕೈಗೊಳ್ಳಲಾಗಿದೆ’ ಎಂದು ಕಾಂಗ್ರೆಸ್‌ ನಾಯಕರೊಬ್ಬರು ತಿಳಿಸಿದರು.

ADVERTISEMENT

ದಕ್ಷಿಣ ಕರ್ನಾಟಕದಲ್ಲಿ ಚಿತ್ರದುರ್ಗ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳ ಪೈಕಿ ಒಂದು ಸ್ಥಳದಲ್ಲಿ ಸಮಾವೇಶ ಆಯೋಜಿಸಲು ನಡೆಯಲಿದೆ. ಉತ್ತರ ಕರ್ನಾಟಕದಲ್ಲಿ ಕಲಬುರಗಿ ಅಥವಾ ರಾಯಚೂರಿನಲ್ಲಿ ಸಮಾವೇಶ ನಡೆಸುವ ಚಿಂತನೆ ನಡೆಸಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿಯ ಮತದಾರರಲ್ಲಿ ‘ಎಡಗೈ’ ಸಮುದಾಯಗಳ ಜನರು ಬಿಜೆಪಿಯತ್ತ ಹೆಚ್ಚು ವಾಲುತ್ತಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ನತ್ತ ಸೆಳೆಯುವುದಕ್ಕೆ ಪೂರಕವಾಗಿ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಅದಕ್ಕೆ ಪೂರಕವಾಗಿ ಸಿದ್ಧತೆ ನಡೆಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 51 ಮೀಸಲು ವಿಧಾನಸಭಾ ಕ್ಷೇತ್ರಗಳಿವೆ. 36 ಕ್ಷೇತ್ರಗಳು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ, 15 ಕ್ಷೇತ್ರಗಳು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ. ಈ ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸುವುದಕ್ಕೆ ಪೂರಕವಾಗಿ ಸಮಾವೇಶಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಚರ್ಚಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಚ್‌.ಸಿ.ಮಹದೇವಪ್ಪ, ‘ಬಿಜೆಪಿಗೆ ಸಾಮಾಜಿಕ ನ್ಯಾಯ, ಮೀಸಲಾತಿ ಮತ್ತು ಸಂವಿಧಾನದಲ್ಲಿ ನಂಬಿಕೆ ಇಲ್ಲ. ರಾಜಕೀಯ ಲಾಭಕ್ಕಾಗಿ ಶೋಷಿತ ಸಮುದಾಯಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಕಾಂಗ್ರೆಸ್‌ ಪಕ್ಷ ಮಾತ್ರ ಸಂವಿಧಾನದ ಆಶಯಗಳನ್ನು ಈಡೇರಿಸುತ್ತದೆ’ ಎಂದರು.

ಸಿದ್ದರಾಮಯ್ಯ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ಜನರ ಬಯಕೆ. ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಸಿದ್ದರಾಮಯ್ಯ ಜನಬೆಂಬಲ ಇರುವ ನಾಯಕ ಎಂಬುದನ್ನು ಅರಿತುಕೊಂಡು ಬಿಜೆಪಿ ಮತ್ತು ಜೆಡಿಎಸ್‌ ಅವರನ್ನು ವಿರೋಧಿಸುತ್ತಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.