ADVERTISEMENT

ಕಾಂಗ್ರೆಸ್‌ಗೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇಲ್ಲ: ಸಿ.ಟಿ. ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 16:38 IST
Last Updated 11 ಜುಲೈ 2021, 16:38 IST
ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪರಿಶಿಷ್ಟ ಜಾತಿ (ಎಸ್‌.ಸಿ) ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಎಸ್‌.ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮತ್ತು ಇತರ ಪದಾಧಿಕಾರಿಗಳು ಪಕ್ಷದ ಸಂಸ್ಥಾಪಕರಾದ ಶಾಮಾ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪರಿಶಿಷ್ಟ ಜಾತಿ (ಎಸ್‌.ಸಿ) ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಎಸ್‌.ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮತ್ತು ಇತರ ಪದಾಧಿಕಾರಿಗಳು ಪಕ್ಷದ ಸಂಸ್ಥಾಪಕರಾದ ಶಾಮಾ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು   

ಬೆಂಗಳೂರು: ದೇಶದ ಸಂವಿಧಾನದ ಕರ್ತೃ ಡಾ.ಬಿ.ಆರ್‌. ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಮತ್ತು ಅವರಿಗೆ ಅವಮಾನ ಮಾಡಿರುವ ಕಾಂಗ್ರೆಸ್‌ ಪಕ್ಷಕ್ಕೆ ಅಂಬೇಡ್ಕರ್‌ ಹೆಸರನ್ನು ಮುಂದಿಟ್ಟುಕೊಂಡು ಮತಯಾಚಿಸುವ ನೈತಿಕತೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ವರ್ಚ್ಯುಯಲ್‌ ಆಗಿ ಉದ್ಘಾಟಿಸಿ ಮಾತನಾಡಿದ ಅವರು, ‘ಅಂಬೇಡ್ಕರ್‌ ನಿಧನದ ನಂತರ ದೆಹಲಿಯಲ್ಲಿ ಅವರ ಅಂತ್ಯಸಂಸ್ಕಾರಕ್ಕೂ ಕಾಂಗ್ರೆಸ್‌ ಅಡ್ಡಿಪಡಿಸಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಂಬೇಡ್ಕರ್‌ ಅವರ ಹುಟ್ಟೂರು ಮಹುವಾ ಪ್ರದೇಶವನ್ನು ಅಭಿವೃದ್ಧಿಪಡಿಸಿ, ಸ್ಮಾರಕ ನಿರ್ಮಿಸುತ್ತಿದೆ’ ಎಂದರು.

ಬಿಜೆಪಿ ದಲಿತ ವಿರೋಧಿ ಎಂದು ವಿರೋಧ ಪಕ್ಷಗಳು ಅಪಪ್ರಚಾರ ನಡೆಸುತ್ತಿವೆ. ಈ ಆರೋಪದಲ್ಲಿ ಹುರುಳಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡುವ ಕೆಲಸವನ್ನು ಪರಿಶಿಷ್ಟ ಜಾತಿ ಮೋರ್ಚಾದ ಸದಸ್ಯರು ನಿರ್ವಹಿಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಯ ಜನರ ಪರವಾಗಿ ಜಾರಿಗೊಳಿಸಿದ ಯೋಜನೆಗಳ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.

ADVERTISEMENT

ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ‘ಮೋದಿಯವರ ಸಂಪುಟದಲ್ಲಿ ದಲಿತ ಸಮುದಾಯಗಳ 20 ಮಂದಿಗೆ ಸ್ಥಾನ ನೀಡಿದ್ದಾರೆ. ಸಂಪುಟದ ಮೂಲಕ ಸಾಮಾಜಿಕ ನ್ಯಾಯ ನೀಡಲಾಗಿದೆ. ಈ ಬೆಳವಣಿಗೆಯಿಂದ ಕಾಂಗ್ರೆಸ್‌ ವಿಚಲಿತವಾಗಿದೆ’ ಎಂದರು.

‘ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ಮುಸ್ಲಿಂ ಸಮುದಾಯದವರಿಂದ ದಾಳಿಗಳು ಹೆಚ್ಚುತ್ತಿವೆ. ಇದರ ಹಿಂದೆ ಯಾರದ್ದಾದರೂ ಕುಮ್ಮಕ್ಕು ಇದೆಯೆ ಎಂಬುದನ್ನು ಸಮುದಾಯದ ಮುಖಂಡರು ಪರಿಶೀಲಿಸಬೇಕು’ ಎಂದು ಹೇಳಿದರು.

ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಬಾಬು, ಜಗದೀಶ್, ಪದಾಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.