ADVERTISEMENT

ಸಚಿವರಿಗೆ ಕಪ್ಪುಬಾವುಟ ಪ್ರದರ್ಶನ ಅನಿವಾರ್ಯ: ಬಿಜೆಪಿಗೆ ಡಿಕೆಶಿ ಎಚ್ಚರಿಕೆ

ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 13:21 IST
Last Updated 19 ಆಗಸ್ಟ್ 2022, 13:21 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಚಿತ್ರದುರ್ಗ: ನಿಮ್ಮ (ಬಿಜೆಪಿ) ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಇಲ್ಲವಾದರೆ ಸಚಿವರಿಗೆ ಕಪ್ಪುಬಾವುಟ ಪ್ರದರ್ಶನ ಹಾಗೂ ಗೋಬ್ಯಾಕ್‌ ಅಭಿಯಾನ ಮಾಡುವುದು ಕಾಂಗ್ರೆಸ್‌ಗೆ ಅನಿವಾರ್ಯವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದರು.

ಚಳ್ಳಕೆರೆಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ ನಾಯಕರಿಗೆ ಅಡ್ಡಿಪಡಿಸುವುದನ್ನು ಮುಂದುವರಿಸಿದರೆ ಬಿಜೆಪಿ ಕೂಡ ಇದೇ ಸಮಸ್ಯೆ ಎದುರಿಸಬೇಕಾಗುತ್ತದೆ. ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಗೆ ಇಳಿಯಬೇಕಾಗುತ್ತದೆ. ಆಗ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಏನಾಗುತ್ತದೆ ಎಂಬ ಅರಿವು ಇದೆಯೇ’ ಎಂದು ಆಕ್ರೋಶಭರಿತವಾಗಿ ಪ್ರಶ್ನಿಸಿದರು.

‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ. ನೆರೆ ಸಂತ್ರಸ್ತರ ಸಂಕಷ್ಟ ಆಲಿಸಿ ಸರ್ಕಾರದ ಗಮನ ಸೆಳೆಯಲು ತೆರಳುತ್ತಿರುವ ಅವರಿಗೆ ಮೊಟ್ಟೆ ಎಸೆದು ಹಿಮ್ಮೆಟ್ಟಿಸಲು ಸಾಧ್ಯವಿಲ್ಲ. ಸರ್ಕಾರದ ಅಧಿಕೃತ ಕಾರ್ಯಕ್ರಮದ ವಿರುದ್ಧ ಧರಣಿಗೆ ಕರೆನೀಡಿದರೆ ಪರಿಸ್ಥಿತಿ ವಿಕೋಪಕ್ಕೆ ಹೋಗಲಿದೆ ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅರ್ಥಮಾಡಿಕೊಳ್ಳಬೇಕು’ ಎಂದರು.

***

ಮಡಿಕೆರೆ ಚಲೊ ಬಗ್ಗೆ ಪಕ್ಷದಲ್ಲಿ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಬೆಂಗಳೂರಿಗೆ ಮರಳಿದ ಬಳಿಕ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಕೃತ್ಯ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಎಲ್ಲೆಡೆ ಬೀದಿಗೆ ಇಳಿದಿದ್ದಾರೆ.

– ಡಿ.ಕೆ.ಶಿವಕುಮಾರ್‌,ಕೆಪಿಸಿಸಿ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.