
ಬೆಂಗಳೂರು: ‘ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂಬುದನ್ನು ಪಟ್ಟಣ ಪಂಚಾಯತಿಗಳ ಚುನಾವಣಾ ಫಲಿತಾಂಶವೇ ಸಾಕ್ಷಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಪಕ್ಷದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ವೀರ ಬಾಲಕರ ದಿನಾಚರಣೆ’ ಕಾರ್ಯಕ್ರಮದಲ್ಲಿ, ಪಟ್ಟಣ ಪಂಚಾಯತಿಗಳ ಚುನಾವಣಾ ವಿಜೇತರನ್ನು ಸನ್ಮಾನಿಸಿ ಅವರು ಮಾತನಾಡಿದರು.
‘ಈ ಸರ್ಕಾರದಿಂದ ಯಾರಿಗೂ ಸಂತಸವಿಲ್ಲ. ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿತ್ತು. ಆದರೆ, ಸರ್ಕಾರ ರಚನೆಯಾಗಿ 48 ಗಂಟೆಯಲ್ಲೇ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ರಾಜ್ಯದ ಪಾಲನ್ನು ರದ್ದುಪಡಿಸಿತು. ರೈತರಿಗೆ ನಮ್ಮ ಸರ್ಕಾರ ನೀಡುತ್ತಿದ್ದ ₹4,000 ನೆರವನ್ನು ಈ ಸರ್ಕಾರ ನಿಲ್ಲಿಸಿತು’ ಎಂದರು.
‘ನಮ್ಮ ಸರ್ಕಾರದ ಹಲವು ಕಾರ್ಯಕ್ರಮಗಳನ್ನು ಈ ಸರ್ಕಾರ ನಿಲ್ಲಿಸಿದೆ. ಜನರ ಸಂಕಷ್ಟಗಳಿಗೂ ಸ್ಪಂದಿಸುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಾದಾಗ ಸೌಜನ್ಯಕ್ಕಾದರೂ ಒಬ್ಬ ಶಾಸಕ ಅಲ್ಲಿಗೆ ಭೇಟಿ ನೀಡಿಲ್ಲ. ಈ ಸರ್ಕಾರಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.