ಬಿ.ವೈ.ವಿಜಯೇಂದ್ರ
(ಸಂಗ್ರಹ ಚಿತ್ರ)
ಬೆಂಗಳೂರು: 'ಉದ್ಯೋಗದ ಹೆಸರಿನಲ್ಲಿ ಮತ ಕೇಳಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಈಗ ಯುವಜನರನ್ನು ಮರೆತಿದೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
'2023ರಲ್ಲಿ ಬೆಳಗಾವಿಯ ಭಾಷಣದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಒಂದು ವರ್ಷದೊಳಗೆ ಭರ್ತಿ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿತ್ತು. ರಾಜ್ಯದ ಲಕ್ಷಾಂತರ ಯುವಜನರು ಕಾಂಗ್ರೆಸ್ ಭರವಸೆಯ ಮೇಲೆ ನಂಬಿಕೆಯನ್ನಿರಿಸಿದ್ದರು' ಎಂದು ಅವರು ಹೇಳಿದ್ದಾರೆ.
'ಈಗ ಎರಡೂವರೆ ವರ್ಷಗಳು ಕಳೆದಿವೆ. ಖಾಲಿ ಹುದ್ದೆಗಳು 2.8 ಲಕ್ಷ ದಾಟಿವೆ. ಆದರೆ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಅಧಿಸೂಚನೆ ಹೊರಡಿಸಿಲ್ಲ' ಎಂದು ಅವರು ಆರೋಪಿಸಿದ್ದಾರೆ.
'ರಾಜ್ಯದಾದ್ಯಂತ ಯುವಜನರು ಆಕ್ರೋಶಗೊಂಡಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಭವಿಷ್ಯ ಡೋಲಾಯಮಾನ ಸ್ಥಿತಿಗೆ ತಲುಪಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಯುವಜನರ ಭವಿಷ್ಯವನ್ನು ಕಡೆಗಣಿಸಲಾಗಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.
'ಕಾಂಗ್ರೆಸ್ ಸರ್ಕಾರವು ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಬಾಕಿ ಇರುವ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಆ ಮೂಲಕ ಯುವಜನತೆಗೆ ಅರ್ಹ ಅವಕಾಶ ಸಿಗುವುದನ್ನು ಖಾತ್ರಿಪಡಿಸಬೇಕು' ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.