ಕಾಂಗ್ರೆಸ್
ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ತಲಾ ಎರಡು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ 2026ರ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಪಕ್ಷದಿಂದ ಆಕಾಂಕ್ಷಿಯಾಗಲು ಬಯಸುವವರಿಂದ ಕಾಂಗ್ರೆಸ್ ಪಕ್ಷ ಅರ್ಜಿ ಆಹ್ವಾನಿಸಿದೆ.
ಪಶ್ಚಿಮ ಪದವೀಧರ–ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿ, ಆಗ್ನೇಯ ಪದವೀಧರ– ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ಹೊರತುಪಡಿಸಿ), ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆ, ಈಶಾನ್ಯ ಶಿಕ್ಷಕ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು) ಮತ್ತು ಬೆಂಗಳೂರು ಶಿಕ್ಷಕ–ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಈ ನಾಲ್ಕು ಕ್ಷೇತ್ರಗಳಿಂದ ಚುನಾಯಿತರಾದ ಸದಸ್ಯರ ಅವಧಿ 2026ರ ನ. 11ರಂದು ಅಂತ್ಯವಾಗಲಿದೆ.
ಈ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸುವವರು ಕೆಪಿಸಿಸಿ ಅಧ್ಯಕ್ಷರ ಹೆಸರಿನಲ್ಲಿ ₹ 1 ಲಕ್ಷದ ಡಿಡಿ ಸಹಿತ ಇದೇ ನ. 1ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
‘ಈ ನಾಲ್ಕು ಕ್ಷೇತ್ರಗಳಲ್ಲಿಯೂ ವಿರೋಧ ಪಕ್ಷದ ಸದಸ್ಯರು ಆಯ್ಕೆಯಾಗಿದ್ದಾರೆ. ನಾನಾ ಕಾರಣಗಳಿಂದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳು ಜಯಶಾಲಿ ಆಗುತ್ತಿದ್ದಾರೆ. ಮುಂಬರುವ ಚುನಾವಣೆ ಗಮನದಲ್ಲಿಟ್ಟು ಪ್ರತಿ ಜಿಲ್ಲೆಯಲ್ಲಿಯೂ ಕಾಂಗ್ರೆಸ್ ಪಕ್ಷದ ಬಗ್ಗೆ ಒಲವು ಇರುವ ಪದವೀಧರರು ಮತ್ತು ಶಿಕ್ಷಕರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರಾಗಿ ನೋಂದಾಯಿಸುವ ಕೆಲಸವನ್ನು ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಮಾಡಬೇಕು. ಈ ಬಗ್ಗೆ ವರದಿಯನ್ನು ಕಳುಹಿಸಿಕೊಡಬೇಕು’ ಎಂದು ಈ ಕ್ಷೇತ್ರಗಳ ವ್ಯಾಪ್ತಿಯ ಪಕ್ಷದ ಮುಖಂಡರಿಗೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.