ADVERTISEMENT

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 10:44 IST
Last Updated 16 ಏಪ್ರಿಲ್ 2022, 10:44 IST
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ   

ಚಿಕ್ಕಮಗಳೂರು: ‘ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್‌. ಈಶ್ವರಪ್ಪ ಅವರನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಆರೋಪಿ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ವತಿಯಿಂದ ಆಜಾದ್‌ ಪಾರ್ಕ್ ವೃತ್ತದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

‘ಈಶ್ವರಪ್ಪ ಅವರನ್ನು ಈವರೆಗೆ ಬಂಧನ ಮಾಡದಿರುವುದರ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈವಾಡ ಇದೆ. ತಪ್ಪು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಾಣುತ್ತಿದ್ದರೂ ಈಶ್ವರಪ್ಪ ಅಮಾಯಕ ಎಂದು ಬಿಜೆಪಿಯ ಹಲವರು ಪ್ರತಿಪಾದಿಸುತ್ತಿದ್ದಾರೆ’ ಎಂದು ದೂರಿದರು.

ADVERTISEMENT

‘ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್‌ 7(ಎ) ಹಾಗೂ 13/1 ಅಡಿ ಪ್ರಕರಣ ದಾಖಲಿಸಬೇಕು. ಹೈಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಸಂತೋಷ್‌ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ಕಾಮಗಾರಿಯ ಬಿಲ್‌ ಪಾವತಿಸಬೇಕು. ಆತನ ಪತ್ನಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕು’ ಎಂದರು.

‘ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದು ಶೇ 40 ಕಮಿಷನ್‌ ಸರ್ಕಾರ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ಪಾಠ ಕಲಿಸಬೇಕು’ ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ಜತೆ ಸೆಲ್ಫಿಗೆ ಯುವತಿ ಬೇಡಿಕೆ– ಪೊಲೀಸರ ತಡೆ:ಸಿದ್ದರಾಮಯ್ಯ ಅವರು ಭಾಷಣ ಮಾಡುವಾಗ ವೇದಿಕೆ ಬಳಿಗೆ ಯುವತಿಯೊಬ್ಬರು ಬಂದರು. ‘ನಾನು ನಿಮ್ಮ ಅಭಿಮಾನಿ, ನಿಮ್ಮ ಜತೆ ಸೆಲ್ಫಿ ತೆಗೆಸಿಕೊಳ್ಳಬೇಕು’ ಎಂದು ಬೇಡಿಕೆ ಇಟ್ಟರು. ಭಾಷಣ ಮುಗಿಯವವರೆಗೂ ಅಲ್ಲಿಯೇ ಕಾದು ನಿಂತಿದ್ದರು. ಪೊಲೀಸರು ಯವತಿಯ ಬ್ಯಾಗು ಎಲ್ಲವನ್ನು ಪರಿಶೀಲಿಸಿದರು. ಫೋಟೊ ತೆಗೆಸಿಕೊಳ್ಳಲು ಅವಕಾಶ ಸಿಗಲಿಲ್ಲ. ಆಗ ಯುವತಿ ಪೊಲೀಸರ ಮೇಲೆ ಕೋಪ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.