ADVERTISEMENT

ದೆಹಲಿಗೆ ಹೊರಟ ಮಲ್ಲಿಕಾರ್ಜುನ ಖರ್ಗೆ: ಡಿಕೆಶಿ ಜೊತೆ ಕೆಲಹೊತ್ತು ಚರ್ಚೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 7:18 IST
Last Updated 25 ನವೆಂಬರ್ 2025, 7:18 IST
   

ಬೆಂಗಳೂರು: ಮಂಗಳವಾರ ಬೆಳಿಗ್ಗೆ ದೆಹಲಿಗೆ ಹೊರಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಸದಾಶಿವನಗರದ ತಮ್ಮ ನಿವಾಸದಲ್ಲಿದ್ದ ಖರ್ಗೆಯವರು ತಮ್ಮ ಮನೆಯಿಂದ ಹೊರಡುತ್ತಿದ್ದಂತೆ, ಅಲ್ಲಿಗೆ ಡಿ.ಕೆ. ಶಿವಕುಮಾರ್‌ ಬಂದಿದ್ದಾರೆ. ಬಳಿಕ ಇಬ್ಬರೂ ಒಂದೇ ಕಾರಿನಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದರು.

ಸುದ್ದಿಗಾರರಿಗೆ ಪ್ರತಿಕ್ರಿಯಿಸಿ ಖರ್ಗೆ, ‘ಸಂವಿಧಾನ ದಿನ ಇದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ಹೋಗುತ್ತಿದ್ದೇನೆ’ ಎಂದರು. ಬೇರೆ ವಿಚಾರಗಳಿಗೆ ಪ್ರತಿಕ್ರಿಯೆ ನೀಡದೆ ಅವರು ತೆರಳಿದರು.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು, ಶಾಸಕರು ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ, ಶಿವಕುಮಾರ್ ಅವರು ಭೇಟಿ ಮಾಡಿರಲಿಲ್ಲ.

ದೆಹಲಿಯಲ್ಲಿ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ನಾಯಕತ್ವದ ಗೊಂದಲ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಖರ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ. ಜೊತೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ ಜೊತೆಗಿನ ಮಾತುಕತೆಯ ವಿಚಾರಗಳನ್ನೂ ಚರ್ಚಿಸುವ ಸಂಭವವಿದೆ.

ಖರ್ಗೆಯವರು ವರದಿ ಒಪ್ಪಿಸಿದ ಬಳಿಕ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರನ್ನೂ ದೆಹಲಿಗೆ ಕರೆಸಿಕೊಳ್ಳಬಹುದು. ಬೆಳಗಾವಿಯಲ್ಲಿ ಡಿ. 8ರಿಂದ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ನಾಯಕತ್ವ ಗೊಂದಲವನ್ನೇ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸರ್ಕಾರವನ್ನು ಮುಜುಗರಕ್ಕೀಡುಮಾಡುವ ಸಾಧ್ಯತೆಯಿದೆ. ಹೀಗಾಗಿ, ಅದಕ್ಕೂ ಮೊದಲೇ ಇಬ್ಬರು ನಾಯಕರನ್ನು ಒಟ್ಟಿಗೆ ಕುಳ್ಳಿರಿಸಿ ಗೊಂದಲ ಪರಿಹರಿಸಲು ಕಾಂಗ್ರೆಸ್‌ ಹೈಕಮಾಂಡ್‌ ಪ್ರಯತ್ನಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

ರಾಹುಲ್‌ ಗಾಂಧಿ ಅವರನ್ನು ಸೋಮವಾರ ಭೇಟಿ ಮಾಡಿ ಚರ್ಚೆ ನಡೆಸಿರುವ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಬೆಂಗಳೂರಿಗೆ ವಾಪಸಾಗಿದ್ದಾರೆ. ಆದರೆ ರಾಹುಲ್‌ ಜೊತೆ ನಡೆಸಿದ ಮಾತುಕತೆಯ ವಿಚಾರ ಹಂಚಿಕೊಳ್ಳಲು ಅವರು ತಯಾರಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.