
ಡಿ.ಕೆ. ಸುರೇಶ್
ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತನ್ನು ತಪ್ಪುವವರಲ್ಲ. ಅವರು ಯಾರಿಗೆ ಮಾತು ಕೊಟ್ಟರೂ ತಪ್ಪುವುದಿಲ್ಲ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು.
‘ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿದ್ದೀರಾ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಅವರ ಬಳಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ. ಅಷ್ಟು ದೊಡ್ಡವನೂ ನಾನಲ್ಲ. ಅವರಿಗೆ ತಮ್ಮದೇ ಆದ ಜವಾಬ್ದಾರಿ ಇದೆ. ಈ ಸರ್ಕಾರದಲ್ಲೂ ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದಾರೊ ಅದರಂತೆ ನಡೆಯುತ್ತಿದ್ದಾರೆ’ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿರುವ ಬಗ್ಗೆ ಕೇಳಿದಾಗ, ‘ಕರ್ನಾಟಕದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿಗೆ ಎರಡೂವರೆ ವರ್ಷ ತುಂಬಿದೆ. ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಅನುಷ್ಠಾನ ಮಾಡಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ’ ಎಂದರು.
‘ಸಿದ್ದರಾಮಯ್ಯ ಅವರು ಅಧಿಕಾರ ಹಸ್ತಾಂತರ ವಿಚಾರದಲ್ಲೂ ಕೊಟ್ಟ ಮಾತಿನಂತೆ ನಡೆಯುತ್ತಾರಾ’ ಎಂದು ಕೇಳಿದಾಗ, ‘ಈ ವಿಚಾರವನ್ನು ಪಕ್ಷದ ವರಿಷ್ಠರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜತೆ ಚರ್ಚೆ ಮಾಡುತ್ತಾರೆ. ಈ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ’ ಎಂದರು.
‘ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಆಸೆ ಎಲ್ಲರಿಗೂ ಇದೆ. ನಾವುಗಳು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವವರು. ಪಕ್ಷ ಏನು ಹೇಳುತ್ತದೆಯೋ ಅದನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಎಲ್ಲ ನಾಯಕರು ಪಾಲಿಸುತ್ತಾರೆ. ಇದು ನಮ್ಮ, ನಿಮ್ಮ ಮುಂದೆ ನಡೆಯುವ ಚರ್ಚೆಯಲ್ಲ. ಇದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಏನೇ ತೀರ್ಮಾನ ಮಾಡುವುದಿದ್ದರೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಇಲ್ಲಿ ವೈಯಕ್ತಿಕ ವಿಚಾರ ಇಲ್ಲ’ ಎಂದರು.
ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ ಎಂದು ಕೇಳಿದಾಗ, ‘ಅವರು ಪಕ್ಷದ ಕೆಲಸ ಮಾಡುತ್ತಿದ್ದು, ನಾಳೆ ಬೇರೆಯವರು ಅಧ್ಯಕ್ಷರಾದರೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ಯಾರೇ ಅಧ್ಯಕ್ಷರಾದರೂ ಅವರಿಗೆ ಅವಕಾಶ ಮಾಡಿಕೊಡಲು ಶಿವಕುಮಾರ್ ಅವರು ಸಿದ್ಧರಿದ್ದಾರೆ’ ಎಂದು ತಿಳಿಸಿದರು.
‘ಅವರೇ ಮುಂದುವರಿಯುತ್ತಾರೆಯೇ’ ಎಂಬ ಪ್ರಶ್ನೆಗೆ, ‘ಅವರು ರಾಜೀನಾಮೆ ನೀಡುವುದಿಲ್ಲ ಎಂದು ನಿಮ್ಮ ಬಳಿ ಹೇಳಿಲ್ಲವಲ್ಲ. ನೀವು ಆ ರೀತಿ ಹೇಳುತ್ತಿದ್ದೀರಾ. ಅವಕಾಶ ಸಿಕ್ಕಾಗ ಏನೆಲ್ಲಾ ಮಾಡಬೇಕೋ ಅದನ್ನು ಶಿವಕುಮಾರ್ ಅವರು ಮಾಡಿದ್ದಾರೆ’ ಎಂದರು.
‘ಡಿ.ಕೆ. ಶಿವಕುಮಾರ್ ಅವರಿಗೆ ಎಂಟು ವರ್ಷಕ್ಕಿಂತ ಹೆಚ್ಚು ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ ದಾಖಲೆ ಬರೆಯುವ ಇಚ್ಛೆ ಇದೆಯೇ’ ಎಂದು ಕೇಳಿದಾಗ, ‘ಆ ರೀತಿ ಏನೂ ಇಲ್ಲ. ಅಧಿಕಾರದ ದಾಖಲೆ ಮಾಡುವ ಕನಸು ಅವರದ್ದಲ್ಲ. ರಾಜಕಾರಣದಲ್ಲಿ ಶಾಶ್ವತವಾಗಿ ಉಳಿಯಬೇಕಾದರೆ, ಜನರಿಗೆ ಆಗಲಿ, ಬೇರೆಯವರಿಗೆ ಆಗಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಆಗ ಶಾಶ್ವತವಾಗಿ ನಾಯಕರಾಗಿ ಉಳಿಯಲು ಸಾಧ್ಯ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ದೇವರಾಜ ಅರಸು, ನಿಜಲಿಂಗಪ್ಪ, ಎಸ್.ಎಂ. ಕೃಷ್ಣ ಸೇರಿದಂತೆ ಎಲ್ಲರೂ ಹೈಕಮಾಂಡ್ ಅಣತಿಯಂತೆ ಕೆಲಸ ಮಾಡಿದ್ದಾರೆ’ ಎಂದರು.
ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಶಿವಕುಮಾರ್ ಅವರು ಪ್ರಸ್ತಾಪ ಮಾಡಿದ್ದಾರಲ್ಲಾ ಎಂದು ಕೇಳಿದಾಗ, ‘ಶಿವಕುಮಾರ್ ಅವರು ಪಕ್ಷದ ವರಿಷ್ಠರಿಗೆ ಏನು ತಿಳಿಸಬೇಕೊ ಅದನ್ನು ತಿಳಿಸಿದ್ದಾರೆ. ಅದು ಪಕ್ಷಕ್ಕೆ ಹಾಗೂ ಪಕ್ಷದ ನಾಯಕತ್ವಕ್ಕೆ ಬಿಟ್ಟ ವಿಚಾರ. ಸಂಘಟನೆ ವಿಚಾರದಿಂದ ಅವರು ತೀರ್ಮಾನ ಮಾಡುತ್ತಾರೆ’ ಎಂದು ತಿಳಿಸಿದರು.
‘ಶ್ರಮಕ್ಕೆ ತಕ್ಕ ಪ್ರತಿಫಲ ಇರುವುದಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಶಿವಕುಮಾರ್ ಅವರ ಶ್ರಮಕ್ಕೆ ಒಂದಲ್ಲಾ ಒಂದು ದಿನ ಫಲ ಸಿಕ್ಕೇ ಸಿಗುತ್ತೆ. ಕಾದು ನೋಡಬೇಕು. ಈ ಅವಧಿಯಲ್ಲಿ ಸಿಗುವುದೇ ಎಂಬುದು ನನಗೆ ಗೊತ್ತಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.