ADVERTISEMENT

ಸಿಎಂ, ಡಿಸಿಎಂ ನಡುವೆ ಗದ್ದುಗೆ ತಿಕ್ಕಾಟ: ಸಂಪುಟ ಸಭೆಯಲ್ಲಿ ಪ್ರಸ್ತಾಪ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 16:00 IST
Last Updated 27 ನವೆಂಬರ್ 2025, 16:00 IST
<div class="paragraphs"><p>ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್</p></div>

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್

   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನಾಯಕತ್ವಕ್ಕಾಗಿ ನಡೆಯುತ್ತಿರುವ ತಿಕ್ಕಾಟದ ವಿಷಯ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಪ್ರಸ್ತಾಪವಾಗಿದೆ.

ಗೊಂದಲ ನಿವಾರಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಸೇರಿದಂತೆ ಕೆಲವು ಹಿರಿಯ ಸಚಿವರ ತಂಡ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ.

ADVERTISEMENT

ಸಚಿವ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಅಸಮಾಧಾನ ವ್ಯಕ್ತಪಡಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ಕೆಲವು ಸಚಿವರು, ಶಾಸಕರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದಾರೆ. ಹೊರಗಡೆ ಏನೇನೊ ಆಗುತ್ತಿದೆ. ಮಾಧ್ಯಮದವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ. ನಾವು ಅದಕ್ಕೆ ಉತ್ತರಿಸಬೇಕಾಗಿದೆ. ಈ ವಿಷಯದ ಬಗ್ಗೆ ಸ್ಪಷ್ಟತೆ ಬೇಕಿದೆ. ಇದು ಸಂಪುಟಕ್ಕೆ ಸಂಬಂಧಿಸಿದ ವಿಷಯ ಅಲ್ಲವೇ ಎಂದು ನೇರವಾಗಿ ಪ್ರಶ್ನಿಸಿದ್ದಾರೆ’ ಎಂದು ಗೊತ್ತಾಗಿದೆ.

‘ಈ ವಿಚಾರದಲ್ಲಿ ಸಚಿವ ಸಂಪುಟವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಾವು ಹಿರಿಯ ಸಚಿವರು ಹೈಕಮಾಂಡ್‌ ನಾಯಕರನ್ನು ಭೇಟಿ ಆಗಬಹುದಲ್ಲವೇ ಎಂದೂ ಕೇಳಿದ್ದಾರೆ. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೌದು ಖರ್ಗೆಯವರು ದೂರವಾಣಿ ಕರೆ ಮಾಡಿದ್ದರು. ನಾಲ್ಕೈದು ಮಂದಿ ಹಿರಿಯರನ್ನು ಕರೆದುಕೊಂಡು ಬನ್ನಿ. ಚರ್ಚೆ ಮಾಡೋಣ ಎಂದು ಖರ್ಗೆ ಹೇಳಿದ್ದಾರೆ.  ಅದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಇದೇನು ದೊಡ್ಡ ವಿಷಯ ಅಲ್ಲ. ನಾನೇ ದೆಹಲಿಗೆ ಎಲ್ಲರನ್ನೂ ಕರೆದುಕೊಂಡು ಹೋಗುತ್ತೇನೆ ಎಂದಿದ್ದಾರೆ ಎಂದು’ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.