ADVERTISEMENT

2ರಂದು ‘ಕೈ’ ಸಭೆ: ಸಮನ್ವಯ ಸಮಿತಿ ರಚನೆ?

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 23:30 IST
Last Updated 30 ಜುಲೈ 2023, 23:30 IST
ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಆಗಸ್ಟ್‌ 2ರಂದು ದೆಹಲಿಯಲ್ಲಿ ನಡೆಯಲಿರುವ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರ ಮತ್ತು ಸಚಿವರ ಸಭೆಯಲ್ಲಿ ಪಕ್ಷ ಮತ್ತು ಸರ್ಕಾರ ಸಮನ್ವಯದಿಂದ ಕೆಲಸ ಮಾಡುವ ಉದ್ದೇಶದಿಂದ ‘ಸಮನ್ವಯ ಸಮಿತಿ’ ರಚಿಸುವ ಸಾಧ್ಯತೆಯಿದೆ.

ದೆಹಲಿಯಲ್ಲಿರುವ ಪಕ್ಷದ ‘ವಾರ್‌ ರೂಂ’ನಲ್ಲಿ ಅಂದು ಬೆಳಿಗ್ಗೆ ನಾಯಕರ ಮತ್ತು ಮಧ್ಯಾಹ್ನದ ಬಳಿಕ ಎಲ್ಲ ಸಚಿವರ ಜೊತೆ ಹೈಕಮಾಂಡ್‌  ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್‌, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಭಾಗವಹಿಸಲಿದ್ದಾರೆ.

ADVERTISEMENT

ಲೋಕಸಭೆ ಚುನಾವಣೆ ಮುಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಪಕ್ಷದ ಮಧ್ಯೆ ಹೆಚ್ಚಿನ ಸಮನ್ವಯ ಅಗತ್ಯವಿದೆ. ಈಗಾಗಾಗಲೇ ಸಚಿವರ ವಿರುದ್ಧ ಪಕ್ಷದ ಕೆಲವು ಶಾಸಕರ ಮುನಿಸಿಕೊಂಡಿದ್ದು, ಇದು ಮುಂದುವರಿಯದಂತೆ ಎಚ್ಚರಿಕೆ ವಹಿಸಬೇಕಿದೆ. ಈ ಉದ್ದೇಶದಿಂದ, ಹಿರಿಯ ಸಚಿವರೊಬ್ಬರ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಲು ಚರ್ಚೆ ನಡೆದಿದೆ. ಎಲ್ಲ ತೀರ್ಮಾನಗಳನ್ನು ಈ ಸಮಿತಿಯಲ್ಲಿ ಚರ್ಚಿಸಿ, ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದೆ ಎಂದೂ ಮೂಲಗಳು ಹೇಳಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಈ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟದ ಎಲ್ಲ ಸದಸ್ಯರು ಕೂಡಾ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.