ಬೆಂಗಳೂರು: ಆನ್ ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಮೂಲಕ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪದಡಿ ಕಳೆದ 15 ದಿನಗಳಿಂದ ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇ.ಡಿ ಕಸ್ಟಡಿ ಅವಧಿ ಸೋಮವಾರಕ್ಕೆ ಮುಕ್ತಾಯಗೊಂಡ ಕಾರಣ ವೀರೇಂದ್ರ ಅವರನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಮಧ್ಯಾಹ್ನ ಹಾಜರುಪಡಿಸಲಾಯಿತು.
ವಿಚಾರಣೆ ವೇಳೆ ಇ.ಡಿ ಪರ ವಿಶೇಷ ಪ್ರಾಸಿಕ್ಯೂಟರ್ ಐ.ಎಸ್.ಪ್ರಮೋದ್ ಚಂದ್ರ ಅವರು, ‘ಆರೋಪಿಯ ಅಕ್ರಮ ಚಟುವಟಿಕೆ ಮತ್ತು ಆರ್ಥಿಕ ಹೇರಾಫೇರಿಗಳ ಕುರಿತಾಗಿ ತನಿಖಾಧಿಕಾರಿ ಸಾಕಷ್ಟು ಪ್ರಮುಖ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಈತನಕ ನಗದು, ಬಂಗಾರ ಸೇರಿದಂತೆ ₹100 ಕೋಟಿ ಮೌಲ್ಯದ ಚರಾಸ್ತಿ ವಶಪಡಿಸಿಕೊಳ್ಳಲಾಗಿದೆ. ಈ ಹಂತದಲ್ಲಿ ನ್ಯಾಯಾಲಯ ಅವರಿಗೆ ಯಾವುದೇ ಉದಾರತೆ ತೋರಿ ಹೊರಗೆ ಬಿಟ್ಟಿದ್ದೇ ಆದರೆ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸುವ ಸಾಧ್ಯತೆ ಇದೆ. ಆದ್ದರಿಂದ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು’ ಎಂದು ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಇದೇ 22ರವರೆಗೆ ಆರೋಪಿ ವೀರೇಂದ್ರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ವೀರೇಂದ್ರ ಪರ ಪದಾಂಕಿತ ಹಿರಿಯ ವಕೀಲರಾದ ಎಚ್.ಎಸ್.ಚಂದ್ರಮೌಳಿ ಮತ್ತು ಕಿರಣ್ ಜವಳಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.