ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹ 100ರ ಗಡಿ ದಾಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಶುಕ್ರವಾರ ರಾಜ್ಯದ ವಿವಿಧೆಡೆ ಪೆಟ್ರೋಲ್ ಬಂಕ್‌ಗಳ ಎದುರು ‘ಪೆಟ್ರೋಲ್ 100 ನಾಟೌಟ್’ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಎಐಸಿಸಿ ಸೂಚನೆಯಂತೆ ರಾಜ್ಯದ ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿ ಪೆಟ್ರೋಲ್ ಬಂಕ್‌ಗಳ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನ ನಡೆಸಿದರು. ‘ಪೆಟ್ರೋಲ್ 100 ನಾಟೌಟ್’ ಎಂಬ ಬರಹವುಳ್ಳ ಭಿತ್ತಿಪತ್ರಗಳನ್ನು ಹಿಡಿದಿದ್ದ ಪ್ರತಿಭಟನಕಾರರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ದರ ನಿಯಂತ್ರಿಸುವಲ್ಲಿ ವಿಫಲವಾಗಿದೆ’ ಎಂದು ಟೀಕಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಗರದ ಶಿವಾನಂದ ವೃತ್ತದ ಬಳಿಕ ರೆಡ್ಡಿ ಪೆಟ್ರೋಲ್ ಬಂಕ್ ಎದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಕೊರೊನಾ ಸೋಂಕಿನ ಸಂಕಷ್ಟದ ಕಾಲದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ದರ ಏರಿಕೆ ಮಾಡುತ್ತಿದೆ. ಇದರಿಂದ ಸಾಮಾನ್ಯ ಜನರು ಜೀವನ ನಿರ್ವಹಣೆ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರದ ಈ ನಿಲುವನ್ನು ವಿರೋಧಿಸಿ ರಾಜ್ಯದಲ್ಲಿ ಐದು ದಿನಗಳ ಕಾಲ 5,000 ಪೆಟ್ರೋಲ್ ಬಂಕ್‌ಗಳ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದರು.
ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ವಿಡಿಯೊ ಮೂಲಕ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಶನಿವಾರ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕು. ರಾಜ್ಯ ಸರ್ಕಾರ ಪೊಲೀಸ್ ಬಲ ಪ್ರಯೋಗಿಸಿ ಹೋರಾಟ ಹತ್ತಿಕ್ಕಲು ಯತ್ನಿಸಬಹುದು. ಆದರೆ, ಪಕ್ಷದ ಕಾರ್ಯಕರ್ತರು ಅದಕ್ಕೆ ಮಣಿಯಬಾರದು’ ಎಂದು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.