ADVERTISEMENT

ಬಿಜೆಪಿಯೇತರ ಎಲ್ಲ ಪಕ್ಷಗಳೂ ಹೋರಾಟಕ್ಕೆ ಕೈಜೋಡಿಸಬೇಕು: ಸಿದ್ದರಾಮಯ್ಯ ಕರೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 6:32 IST
Last Updated 16 ಜೂನ್ 2022, 6:32 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರಿಗೆ ಕಿರುಕೊಳ ಕೊಡುವ ಕೆಟ್ಟ ಹಾದಿ ಹಿಡಿದಿದೆ. ಇದರ ವಿರುದ್ಧದ ಹೋರಾಟಕ್ಕೆ ಬಿಜೆಪಿಯೇತರ ಎಲ್ಲ ಪಕ್ಷಗಳೂ ಒಗ್ಗೂಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ‌ ನೀಡಿದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ‌ ನಿರ್ದೇಶನಾಲಯ ನಿರಂತರವಾಗಿ ಸಮನ್ಸ್ ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಗುರುವಾರ ಹಮ್ಮಿಕೊಂಡಿರುವ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ಆರಂಭಕ್ಕೂ ಮುನ್ನ ಅವರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ.‌ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು ಗಾಳಿಗೆ ತೂರಿ ಆಡಳಿತ ನಡೆಸುತ್ತಿದೆ. ಇಂತಹ ನಡವಳಿಕೆ ವಿರುದ್ಧ ದೇಶದಾದ್ಯಂತ ಹೋರಾಟ ಆರಂಭವಾಗಬೇಕು ಎಂದರು.

ADVERTISEMENT

ಕೇಂದ್ರ ಸರ್ಕಾರದ ವಿರುದ್ಧದ ಹೋರಾಟಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷದ ಮಮತಾ ಬ್ಯಾನರ್ಜಿ, ಡಿಎಂಕೆ ಪಕ್ಷದ ಸ್ಟಾಲಿನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಬಿಜೆಪಿಯೇತರ ಪಕ್ಷಗಳ‌ ಎಲ್ಲ ನಾಯಕರು ಕೈ ಜೋಡಿಸಬೇಕು. ಆ ಮೂಲಕ‌ ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಸೋಲಿಸಬೇಕು ಎಂದು ಹೇಳಿದರು.

ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ಕೇಡುಗಾಲ ಬಂದಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಜನರು ಬಿಜೆಪಿಯನ್ನು ಸೋಲಿಸುತ್ತಾರೆ. 2024ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.