ADVERTISEMENT

ಕಾನೂನು, ಸಂವಿಧಾನ ತಿಳಿದಿಲ್ಲವೆ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 8:43 IST
Last Updated 14 ಜೂನ್ 2022, 8:43 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಶಾಂತಿಯುತ ಪ್ರತಿಭಟನೆ ಹಕ್ಕನ್ನು ನಿರಾಕರಿಸುತ್ತಿರುವ ಬಿಜೆಪಿ ನಾಯಕರಿಗೆ ಸಂವಿಧಾನ, ಕಾನೂನು, ಮೂಲಭೂತ ಹಕ್ಕುಗಳ ಬಗ್ಗೆ ಅರಿವಿಲ್ಲವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ ಸದಸ್ಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಎಐಸಿಸಿ ಕಚೇರಿಗೆ ಹೊರಟಿದ್ದ ಸಂಸದ ಡಿ.ಕೆ. ಸುರೇಶ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಶಾಸಕ ದಿನೇಶ್‌ ಗುಂಡೂರಾವ್‌ ಮತ್ತಿತರರನ್ನು ಬಂಧಿಸಿ, ದೌರ್ಜನ್ಯ ಎಸಗಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದರು.

ಚೀಟಿ ತಿಂದವರು ತಿಹಾರ್‌ ಜೈಲಿಗೆ ಹೋಗಿದ್ದಾರೆ, ಪ್ರತಿಭಟನೆ ನಡೆಸಿದವರು ಜೈಲಿಗೆ ಹೋಗುತ್ತಾರೆ ಎಂಬ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, 'ಇವರಿಗೆ ಸಂವಿಧಾನ, ಕಾನೂನು, ಮೂಲಭೂತ ಹಕ್ಕುಗಳ ಬಗ್ಗೆ ತಿಳಿದಿಲ್ಲವೆ? ಶಾಂತಿಯುತ ಪ್ರತಿಭಟನೆಗೆ ಕಾನೂನಿನಲ್ಲಿ ಅವಕಾಶವಿದೆ ಎಂಬುದು ಗೊತ್ತಿಲ್ಲವೆ? ಹಾಗಿದ್ದರೆ ಇವರೇಕೆ ಹಿಂದೆ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದರು' ಎಂದು ಕೇಳಿದರು.

ADVERTISEMENT

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಷೇರುಗಳನ್ನು ಕಬಳಿಸಿರುವ ಆರೋಪ ಕುರಿತು ಕೇಳಿದಾಗ, 'ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲೇ ಇಲ್ಲ? ಇವರು ಎಲ್ಲಿ ಹೋರಾಟ ಮಾಡಿದ್ದರು' ಎಂದು ಮರುಪ್ರಶ್ನೆ ಹಾಕಿದರು.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ಕುರಿತು ಹಿಂದೆಯೇ ತನಿಖೆ ನಡೆಸಿ, ಕ್ಲೀನ್‌ ಚಿಟ್‌ ನೀಡಲಾಗಿತ್ತು. ಈಗ ರಾಜಕೀಯ ದುರುದ್ದೇಶದಿಂದ ಮತ್ತೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಕಾನೂನು ಪ್ರಕಾರ ತನಿಖೆ ನಡೆಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ತನಿಖೆ ಹೆಸರಿನಲ್ಲಿ ದೌರ್ಜನ್ಯ ನಡೆಸುವುದನ್ನು ವಿರೋಧಿಸುತ್ತೇವೆ ಎಂದರು.

ತಮಿಳುನಾಡಿಗೆ ಅವಕಾಶವೇ ಇಲ್ಲ: ಮೇಕೆದಾಟು ಯೋಜನೆಯನ್ನು ವಿರೋಧಿಸಲು ತಮಿಳುನಾಡು ಸರ್ಕಾರಕ್ಕೆ ಅವಕಾಶವೇ ಇಲ್ಲ. ಈ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ. ಈಗ ಯೋಜನೆ ಅನುಷ್ಠಾನಕ್ಕೆ ಅನುಮತಿ ಪಡೆಯುವ ಇಚ್ಛಾಶಕ್ತಿಯನ್ನು ರಾಜ್ಯದ ಬಿಜೆಪಿ ಸರ್ಕಾರ ಮಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.