ರಾಹುಲ್ ಗಾಂಧಿ
ಪಿಟಿಐ ಚಿತ್ರ
ಬೆಂಗಳೂರು: ಚುನಾವಣೆಯಲ್ಲಿ ಮತ ಕಳ್ಳತನದ ನಡೆದಿದೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ (ಆಗಸ್ಟ್ 8) ನಡೆಯಲಿರುವ ಪ್ರತಿಭಟನಾ ಸಮಾವೇಶದ ಸಿದ್ಧತೆಗಾಗಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೊ ಭವನದಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಯಲಿದೆ.
ಸಂಜೆ 6 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಎಐಸಿಸಿಯಿಂದ ನೇಮಕಗೊಂಡಿರುವ ಉಸ್ತುವಾರಿ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.
ಎಲ್ಲ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳು, ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳು, ನಿಗಮ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ನಾಯಕರಿಗೂ ಈ ಸಭೆಗೆ ಆಹ್ವಾನ ನೀಡಲಾಗಿದೆ.
ಇದೇ 5ರಂದು ನಡೆಯಬೇಕಿದ್ದ ಈ ಪ್ರತಿಭಟನಾ ಸಮಾವೇಶವನ್ನು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಕಾರಣಕ್ಕೆ 8ಕ್ಕೆ ಮುಂದೂಡಲಾಗಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯಲು ಹೋರಾಟದ ರೂಪುರೇಷೆ ಸಿದ್ಧಪಡಿಸುವ ಕುರಿತು ಸಭೆಯಲ್ಲಿ ಪಕ್ಷದ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.