ADVERTISEMENT

ಕಾಂಗ್ರೆಸ್‌ಗೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 5:38 IST
Last Updated 1 ಜೂನ್ 2022, 5:38 IST
ಬ್ರಿಜೇಶ್ ಕಾಳಪ್ಪ
ಬ್ರಿಜೇಶ್ ಕಾಳಪ್ಪ   

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ಸುಪ್ರೀಂ ಕೋರ್ಟ್‌ ವಕೀಲ ಬ್ರಿಜೇಶ್ ಕಾಳಪ್ಪಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಕಾಳಪ್ಪ, ವೈಯಕ್ತಿಕ ಕಾರಣಗಳಿಂದ ಪಕ್ಷ ತೊರೆಯುವುದಾಗಿ ತಿಳಿಸಿದ್ದಾರೆ.

ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್ ವಕ್ತಾರ ಹಾಗೂ ಕಾನೂನು ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಅವರು ಕೊಡಗು -ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಬಯಸಿದ್ದರು. ಇದೀಗ ವಿಧಾನಪರಿಷತ್‌ ಟಿಕೆಟ್‌ ಆಕಾಂಕ್ಷಿ ಆಗಿದ್ದರು. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ ಎಂಬ ಅಸಮಾಧಾನ ರಾಜೀನಾಮೆಗೆ ಕಾರಣ ಆಗಿರಬಹುದು ಎಂದು ಹೇಳಲಾಗಿದೆ

ADVERTISEMENT

ರಾಜೀನಾಮೆ ಪತ್ರದಲ್ಲಿ ಏನಿದೆ?
‘ಪಕ್ಷ ನನಗೆ ಹಲವು ಅವಕಾಶಗಳನ್ನು ನೀಡಿದೆ. ಅದಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. 2013 ರಿಂದ ನಾನು ರಾಷ್ಟ್ರೀಯ ಹಾಗೂ ವಿವಿಧ ಮಾಧ್ಯಮಗಳಲ್ಲಿ ಕಾಂಗ್ರೆಸ್ ವಕ್ತಾರನಾಗಿ ಪಕ್ಷವನ್ನು ಸಮರ್ಥಿಸಿಕೊಂಡಿದ್ದೇನೆ. ಸುಮಾರು 6,497 ಮಾಧ್ಯಮ ಚರ್ಚೆಗಳಲ್ಲಿ ಭಾಗಿಯಾಗಿದ್ದೇನೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಆದರೆ ಇತ್ತೀಚಿನ ದಿನಗಳಲ್ಲಿ ನಾನು ಈ ವಿಚಾರವಾಗಿ ನಿರಾಸಕ್ತನಾಗಿದ್ದೇನೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಈ ಮೂಲಕ 1997 ರಿಂದ ಆರಂಭವಾದ ನನ್ನ ಕಾಂಗ್ರೆಸ್ ಪಕ್ಷದಲ್ಲಿನ ಪಯಣವನ್ನು ಕೊನೆಗೊಳಿಸುತ್ತೇನೆ’ ಎಂದು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಕಾಳಪ್ಪ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.