ADVERTISEMENT

ಬಂಜಾರ ಸಮಾಜವನ್ನು ‘ಟಾರ್ಗೆಟ್’ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 11:18 IST
Last Updated 23 ಫೆಬ್ರುವರಿ 2026, 11:18 IST
<div class="paragraphs"><p>ಬಿ.ವೈ.ವಿಜಯೇಂದ್ರ</p></div>

ಬಿ.ವೈ.ವಿಜಯೇಂದ್ರ

   

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮಾಜವನ್ನೇ ‘ಟಾರ್ಗೆಟ್‌’ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದೂರಿದ್ದಾರೆ.

ಬಂಜಾರ ಸಮಾಜವು ಬಿಜೆಪಿ ಜತೆ ಗಟ್ಟಿಯಾಗಿ ನಿಂತಿರುವ ಕಾರಣ ಕಾಂಗ್ರೆಸ್‌ಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಬಂಜಾರ ಸಮಾಜಕ್ಕೆ ಅನ್ಯಾಯವಾಗಿದೆ ಮತ್ತು ಸಮುದಾಯವನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.

ADVERTISEMENT

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಂಜಾರ ಸಮುದಾಯದ ಕಾರ್ಯಕ್ರಮಕ್ಕೆ ಬಂದಾಗ ಸಹಜವಾಗಿ ಆ ಸಮಾಜದ ಯುವಕರು ಘೇರಾವ್‌ ಮಾಡಿ ಪ್ರತಿಭಟನೆ ನಡೆಸಿದ್ದರು. ಇದನ್ನು ಸಹಿಸದ ಶಿವಕುಮಾರ್ ಓಡಿ ಹೋಗುವುದರ ಜತೆಗೆ ಘೋಷಣೆ ಕೂಗಿದ ಯುವಕರ ಮೇಲೆ ಎಫ್‌ಐಆರ್‌ ಹಾಕಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಶಾಸಕ ಚಂದ್ರ ಲಮಾಣಿ ಅವರನ್ನೂ ಟಾರ್ಗೆಟ್ ಮಾಡಲಾಗಿದೆ. ಅವರು ಕೋರ್ಟ್‌ನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈಗಾಗಲೇ ಅನೇಕ ಆಡಿಯೊಗಳು ಹೊರಬಂದಿವೆ. ಅದರ ಸತ್ಯಾಸತ್ಯತೆ ಹೊರಬರಬೇಕಿದೆ ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಭ್ರಷ್ಟಾಚಾರದ ಕುರಿತು ಮಾತನಾಡುವ ಯೋಗ್ಯತೆ ಇದೆಯಾ? ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ವಾಲ್ಮೀಕಿ ಹಗರಣ, ಮುಡಾ ಹಗರಣ ನಡೆದಿದೆ. ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆಗೆ ಬಳಸಿಕೊಂಡಿಲ್ಲವೇ? ಪ್ರಿಯಾಂಕ್  ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ. ಭ್ರಷ್ಟಾಚಾರಕ್ಕೆ ಜಾತಿ ಲೇಪನ ಹಚ್ಚುವುದಿಲ್ಲ. ಸತ್ಯಾಸತ್ಯತೆ ಹೊರಗೆ ಬರಲಿ, ತನಿಖೆ ನಡೆಯಲಿ ಎಂದು ವಿಜಯೇಂದ್ರ ಹೇಳಿದರು.

ಸಿದ್ದರಾಮಯ್ಯ ಅವರಿಗೆ ಬಿಜೆಪಿ ಮೇಲೆ ಸಿಟ್ಟು ಇಲ್ಲ. ಆದರೆ ಅವರಿಗೆ ಅವರ ಪಕ್ಷದಲ್ಲಿರುವವರ ಮೇಲೆಯೇ ಕೋಪವಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕುರಿ ಕಾಯುತ್ತಿದ್ದ ತಾವು ಮುಖ್ಯಮಂತ್ರಿ ಆಗಿದ್ದಕ್ಕೆ ಕೆಲವರಿಗೆ ಹೊಟ್ಟೆ ಕಿಚ್ಚು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆ ಬಗ್ಗೆ ನಮಗೆ ಸಂತೋಷವಿದೆ. ಹೀಗಾಗಿ ಅವರು ಈ ಬಜೆಟ್‌ನಲ್ಲಾದರೂ ಹಿಂದುಳಿದ ವರ್ಗಗಳ ನಿಗಮಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.