ADVERTISEMENT

ಭಾಷೆಗಳಿಗೆ ಅನುದಾನ ಹಂಚಿಕೆ ವಿಚಾರ l ಕಾಂಗ್ರೆಸ್‌–ಬಿಜೆಪಿ ವಾಕ್ಸಮರ...

​ಪ್ರಜಾವಾಣಿ ವಾರ್ತೆ
Published 27 ಮೇ 2025, 23:30 IST
Last Updated 27 ಮೇ 2025, 23:30 IST
<div class="paragraphs"><p>ಬಿಜೆಪಿ, ಕಾಂಗ್ರೆಸ್‌</p></div>

ಬಿಜೆಪಿ, ಕಾಂಗ್ರೆಸ್‌

   
 ರಾಜ್ಯದಲ್ಲಿ ವಿವಿಧ ಭಾಷೆಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬಿರುಸಿನ ಚರ್ಚೆ ನಡೆದಿರುವ ಬೆನ್ನಲ್ಲೇ, ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ವಾಕ್ಸಮರ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶ’

‘ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಕನ್ನಡ ಭಾಷೆಗಾಗಿ ಕೇವಲ ₹32 ಕೋಟಿ ನೀಡಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ಬಿಜೆಪಿ ಹಂಚಿಕೊಂಡು ಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಅಕ್ಷಮ್ಯ ಅಪರಾಧ. ರಾಷ್ಟ್ರೀಯ ಪಕ್ಷವೊಂದು ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್‌ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ADVERTISEMENT

‘ಸರ್ಕಾರ 2025-26ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ₹34,438 ಕೋಟಿ ಮತ್ತು ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳಿಗೆ ಸೇರಿದ ಶಾಲೆಗಳಿಗೆ ₹4,150 ಕೋಟಿ ಹೀಗೆ ಕನ್ನಡ ಭಾಷೆಯ ಶಾಲೆಗಳಿಗಾಗಿ ಒಟ್ಟು ₹38,688 ಕೋಟಿ ನೀಡಿದೆ. ಸರ್ಕಾರಿ ಶಾಲೆಗಳ ನಿರ್ವಹಣೆ ಮತ್ತು ಮೂಲಸೌಕರ್ಯ
ಗಳ ನಿರ್ಮಾಣಕ್ಕೆ ₹999.30 ಕೋಟಿ ಒದಗಿಸಲಾಗಿದೆ. ಹೀಗಿರುವಾಗ ಕನ್ನಡ ಭಾಷೆಗೆ ಸರ್ಕಾರ ಕೇವಲ ₹32 ಕೋಟಿ ಅನುದಾನ ನೀಡುತ್ತಿದೆ ಎಂಬ ಮಾಹಿತಿಯ ಪ್ರಸಾರದ ಹಿಂದೆ ರಾಜಕೀಯ ದುರುದ್ದೇಶವಿದೆ’ ಎಂದಿದ್ದಾರೆ.

‘ಅತಿ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಇರುವ ಉರ್ದು ಮಾಧ್ಯಮ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಹಾಗೂ ಮೌಲಾನಾ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸುವ ಉದ್ದೇಶದಿಂದ ಅಲ್ಪಸಂಖ್ಯಾತ ಇಲಾಖೆಯಡಿ ಪ್ರಸಕ್ತ ಸಾಲಿನಲ್ಲಿ ₹100 ಕೋಟಿ ಒದಗಿಸಲಾಗಿದೆ. ಈ ಅನುದಾನವನ್ನು ಕೇವಲ ಭಾಷಾ ಕಲಿಕೆಗೆ ಮಾತ್ರವಲ್ಲ ಶಾಲೆಗಳ ಮೂಲಸೌಕರ್ಯ, ಶಿಕ್ಷಕರ ನೇಮಕಾತಿ, ಪಠ್ಯಪುಸ್ತಕ ಮತ್ತು ಕಟ್ಟಡಗಳ ನಿರ್ಮಾಣಕ್ಕೆ ಬಳಸಲಾಗುವುದು. ಕನ್ನಡ, ಉರ್ದು ಭಾಷೆಗಳು ಸೇರಿದಂತೆ ಯಾವುದೇ ಭಾಷೆಯನ್ನು ನಿರ್ದಿಷ್ಟ, ಧರ್ಮದ ಜೊತೆ ಜೋಡಿಸುವುದು ಆ ಭಾಷೆಗಳಿಗೆ ತೋರುವ ಅಗೌರವ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.

‘ಕನ್ನಡವನ್ನು ಎರಡನೇ ದರ್ಜೆಗೆ ದೂಡುವ ಯತ್ನ’

‘ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಹೆಸರಾದ ಸಿದ್ದರಾಮಯ್ಯನವರು, ಈಗ ಮುಖ್ಯಮಂತ್ರಿಯಾಗಿ ಕನ್ನಡ ಅಭಿವೃದ್ಧಿಗೆ ₹32 ಕೋಟಿ ಮತ್ತು ಉರ್ದುಗೆ ₹100 ಕೋಟಿ ನೀಡಿದ್ದಾರೆ. ಕನ್ನಡವನ್ನು ಎರಡನೇ ದರ್ಜೆ ಭಾಷೆಯಾಗಿಸುವ ಈ ಕ್ರಮವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು’ ಎಂದು ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದರು.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಟಿಪ್ಪು ಸುಲ್ತಾನ್, ಮೈಸೂರು ಸಂಸ್ಥಾನವನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡಿದ್ದಾಗ ಕನ್ನಡ ಆಡಳಿತ ಭಾಷೆಯ ಬದಲಾಗಿ ಪಾರ್ಸಿ ಭಾಷೆಯನ್ನು ಆಡಳಿತ ಭಾಷೆಯಾಗಿ ಹೇರಿದ್ದ. ಇವರ ಮೇಲೆ ಟಿಪ್ಪುವಿನ ಭೂತದ ಪರಕಾಯ ಪ್ರವೇಶ ಆಗಿದೆಯೇ’ ಎಂದು ಪ್ರಶ್ನಿಸಿದರು.

‘ಸರ್ಕಾರದ ಈ ನಡೆಯಿಂದ ಆಘಾತವಾಗಿದೆ. ಒಂದು ಕಡೆ ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಬದಲಿಗೆ ನಾವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯುತ್ತಿದ್ದೇವೆ. ಇಂಥದ್ದರಲ್ಲಿ ಕನ್ನಡಕ್ಕೆ ಕಮ್ಮಿ, ಉರ್ದುಗೆ ಹೆಚ್ಚು ಹಣ ನೀಡಿದ್ದಾರೆ. ಕೊಡವ, ಕೊಂಕಣಿ, ತುಳು ಭಾಷೆಗಳಿಗೆ ಕೇವಲ ತಲಾ ₹45 ಲಕ್ಷ ಕೊಟ್ಟಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಇದರಿಂದ ಚರಿತ್ರೆಯಲ್ಲಿ ಮುಖ್ಯಮಂತ್ರಿ ಮತ್ತು ಈ ಸರ್ಕಾರಕ್ಕೆ ಕಳಂಕ ಅಂಟಲಿದೆ’ ಎಂದರು.

ಕನ್ನಡಕ್ಕೆ ಮೊದಲ ಆದ್ಯತೆ: ಬಿಳಿಮಲೆ

‘ಭಾಷಾವಾರು ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕನ್ನಡಕ್ಕೆ ಮೊದಲ ಆದ್ಯತೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮಾಹಿತಿ ಸತ್ಯಕ್ಕೆ ದೂರ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. 

‘ರಾಜ್ಯ ಸರ್ಕಾರವು 2025–26ನೇ ಸಾಲಿನ ಬಜೆಟ್‌ನಲ್ಲಿ ಹಿಂದಿನ ವರ್ಷದ ಖರ್ಚು ಮತ್ತು ಪ್ರಸಕ್ತ ವರ್ಷದ ಬೇಡಿಕೆಯನ್ನು ಪರಿಶೀಲಿಸಿ, ಅನುದಾನ ಮೀಸಲಿಟ್ಟಿದೆ. ಕಳೆದ ಬಜೆಟ್‌ಗಿಂತ ಶೇ 11.07ರಷ್ಟು (₹ 864 ಕೋಟಿ ) ಅನುದಾನ ಹೆಚ್ಚಿಸಿದೆ’ ಎಂದು ಮಾಹಿತಿ ನೀಡಿದ್ದಾರೆ. 

‘ಕನ್ನಡದ ಉಪ ಭಾಷೆಗಳಾದ ತುಳು, ಕೊಂಕಣಿ, ಕೊಡವ, ಬ್ಯಾರಿ, ಅರೆಭಾಷೆಗೆ ₹ 10 ಕೋಟಿ ಅನುದಾನ ಒದಗಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಒಟ್ಟು ₹ 4,510 ಕೋಟಿ ಮೀಸಲಿಡಲಾಗಿದೆ. ಭಾಷೆಯ ಹೆಸರಿನಲ್ಲಿ ತಪ್ಪು ಮಾಹಿತಿ ಮತ್ತು ಕೋಮು ದ್ವೇಷಕ್ಕೆ ಅವಕಾಶ ನೀಡಬಾರದು’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.