ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್‌ ಹೋಳಾಗಲಿದೆ: ನಳಿನ್‌ ಕುಮಾರ್‌ ಕಟೀಲ್‌

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2022, 16:08 IST
Last Updated 24 ಏಪ್ರಿಲ್ 2022, 16:08 IST
ನಳಿನ್‌ ಕುಮಾರ್‌ ಕಟೀಲ್‌
ನಳಿನ್‌ ಕುಮಾರ್‌ ಕಟೀಲ್‌   

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಪಟ್ಟಕ್ಕಾಗಿ ಸಂಘರ್ಷ ಆರಂಭವಾಗಿದೆ. ಅಕ್ಟೋಬರ್‌ ವೇಳೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಹೋಳಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಬಿಜೆಪಿ ಬೆಂಗಳೂರು ಮಹಾನಗರ ಘಟಕದ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಪಕ್ಷದ ಸಂಘಟನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಸತತವಾಗಿ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಮೇಲುಗೈ ಸಾಧಿಸುತ್ತಿದೆ. ಇದನ್ನು ಕಂಡು ಕಾಂಗ್ರೆಸ್‌ನವರು ಕಂಗಾಲಾಗಿದ್ದಾರೆ. ರಾಜ್ಯದ ಜನರೂ ಕಾಂಗ್ರೆಸ್‌ ಮುಕ್ತ ಕರ್ನಾಟಕ ಮಾಡಲು ಕಾಯುತ್ತಿದ್ದಾರೆ’ ಎಂದರು.

ಬೆಂಗಳೂರು ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಹಲವು ಕೊಡುಗೆಗಳನ್ನು ನೀಡಿದೆ. ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳಿಂದ ನಗರದ ಸಮಗ್ರ ಅಭಿವೃದ್ಧಿ ಆಗುತ್ತಿದೆ. ಜನರು ಅಭಿವೃದ್ಧಿಯನ್ನು ಬೆಂಬಲಿಸುವುದಕ್ಕಾಗಿ ಬಿಜೆಪಿಗೆ ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಹೇಳಿದರು.

ADVERTISEMENT

ನಗರದ ಅಭಿವೃದ್ಧಿಗೆ ಕಾಂಗ್ರೆಸ್‌ನ ಕೊಡುಗೆ ಏನೂ ಇಲ್ಲ. ಗೂಂಡಾಗಿರಿಯನ್ನು ಬೆಂಗಳೂರಿಗೆ ನೀಡಿದ್ದೇ ಕಾಂಗ್ರೆಸ್‌ ಕೊಡುಗೆ. ಕಾಂಗ್ರೆಸ್‌ ಶಾಸಕರು ನಾಗರಿಕರಿಗೆ ಕಪಾಳಮೋಕ್ಷ ಮಾಡಿದರೂ ಆ ಪಕ್ಷದ ನಾಯಕರು ಚಕಾರ ಎತ್ತುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಪಕ್ಷ ಸಂಘಟನಾ ತಂಡದ ನೇತೃತ್ವ ವಹಿಸಿರುವ ಜಗದೀಶ ಶೆಟ್ಟರ್, ಸಚಿವರಾದ ಎಸ್.ಟಿ. ಸೋಮಶೇಖರ್, ಮುನಿರತ್ನ, ಕೆ. ಗೋಪಾಲಯ್ಯ, ಬೈರತಿ ಬಸವರಾಜ, ಸಂಸದ ತೇಜಸ್ವಿಸೂರ್ಯ, ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ, ಶಾಸಕರಾದ ಎಸ್. ರಘು, ಸತೀಶ್ ರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಮುನಿರಾಜು ಗೌಡ, ಅ. ದೇವೇಗೌಡ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಸುಬ್ಬನರಸಿಂಹ, ಬೆಂಗಳೂರು ನಗರದ ವಿವಿಧ ಜಿಲ್ಲಾ ಘಟಕಗಳ ಅಧ್ಯಕ್ಷರಾದ ಬಿ. ನಾರಾಯಣ, ಜಿ. ಮಂಜುನಾಥ್ ಮತ್ತು ಎನ್.ಆರ್. ರಮೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.