ADVERTISEMENT

ಫೆ. 24, 25ರಂದು ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ’: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಜನವರಿ 2024, 9:05 IST
Last Updated 8 ಜನವರಿ 2024, 9:05 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

   

ಬೆಂಗಳೂರು: ಸಂವಿಧಾನ ಜಾರಿಗೆ ಬಂದು 75ನೇ ವರ್ಷಾಚರಣೆಯ ಅಂಗವಾಗಿ ಅರಮನೆ ಮೈದಾನದಲ್ಲಿ ಫೆ. 24 ಮತ್ತು 25ರಂದು ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ’ ಸಮಾವೇಶ ನಡೆಯಲಿದೆ.

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ (ಐಸೆಕ್‌) ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ವಿಚಾರ ಸಂಕಿರಣ ಹಾಗೂ ಕ್ರೈಸ್‌ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾವೇಶದ ಪೂರ್ವಭಾವಿ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಸೋಮವಾರ ಸಭೆ ನಡೆಯಿತು.

‘ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆ ಎತ್ತಿ ಹಿಡಿಯುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗುತ್ತಿದೆ. ಸಮಾವೇಶಕ್ಕೆ ಪೂರ್ವಭಾವಿಯಾಗಿ ಇದೇ 26ರಿಂದ ‘ಸಂವಿಧಾನ ಜಾಗೃತಿ ಜಾಥಾ’ ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು. 

ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣತರ ಚರ್ಚೆಯನ್ನು ಆಧರಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾ ಗೋಷ್ಠಿಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಸಚಿವರಾದ ಎಚ್.ಕೆ. ಪಾಟೀಲ, ಕೆ ಎಚ್. ಮುನಿಯಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯ  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್‌ ಪಿ. ಮಣಿವಣ್ಣನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.