ADVERTISEMENT

ಪ್ರತಿ ಗ್ರಾಮದಲ್ಲೂ ಗೋಶಾಲೆ ನಿರ್ಮಿಸಿ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 28 ಜನವರಿ 2022, 16:18 IST
Last Updated 28 ಜನವರಿ 2022, 16:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:’ರಾಜ್ಯದ ಪ್ರತಿ ಗಾಮದಲ್ಲೂ ಗೋಶಾಲೆ ಆರಂಭಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದೆ.

ಈ ಕುರಿತಂತೆ ಹೈಕೋರ್ಟ್‌ನ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು, ’ಪ್ರತಿ ತಾಲ್ಲೂಕು ಮಟ್ಟದಲ್ಲೂ ಗೋಶಾಲೆಗಳನ್ನು ತೆರೆಯಲಾಗಿದ್ದು,ಒಟ್ಟು 197 ಗೋಶಾಲೆಗಳಿಗೆ ಅನುದಾನ ನೀಡಲಾಗಿದೆ‘ ಎಂದು ತಿಳಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ’ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ. ಜಿಲ್ಲೆ ಹಾಗೂ ತಾಲ್ಲೂಕು ಮಾತ್ರವಲ್ಲದೆ ಪ್ರತಿಯೊಂದು ಗ್ರಾಮ ಮಟ್ಟದಲ್ಲೂ ಗೋ ಶಾಲೆ ತೆರೆಯಬೇಕು‘ ಎಂಬ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.

’ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಯಾವ ಮಾರ್ಗಸೂಚಿಗಳಿವೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆಗೆ ಮಾಹಿತಿ ನೀಡಬೇಕು. ಅಂತೆಯೇ, ಬೀಡಾಡಿ ಪ್ರಾಣಿಗಳ ಕಲ್ಯಾಣಕ್ಕಾಗಿ ಯಾವುದಾದರೂ ಯೋಜನೆ ರೂಪಿಸಲಾಗಿದೆಯೇ ಎಂಬ ಬಗ್ಗೆಯೂ ವಿವರಣೆ ನೀಡಬೇಕು‘ ಎಂದು ಸರ್ಕಾರಕ್ಕೆ ಸೂಚಿಸಿತು.

’ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಈಗಾಗಲೇ ಇರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.