ADVERTISEMENT

ಕನಕಪುರದ ಕೆರೆಯಲ್ಲಿ ಶೌಚಾಲಯ ನಿರ್ಮಾಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 15:03 IST
Last Updated 19 ಜನವರಿ 2026, 15:03 IST
<div class="paragraphs"><p>ಹೈಕೋರ್ಟ್‌</p></div>

ಹೈಕೋರ್ಟ್‌

   

ಬೆಂಗಳೂರು: ಕನಕಪುರ ತಾಲ್ಲೂಕು ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದ ಸರ್ಕಾರಿ ಕೆರೆ ಜಾಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುತ್ತಿರುವುದನ್ನು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಕಬ್ಬಾಳು ಗ್ರಾಮದ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್‌ ವಕೀಲೆ ಮಾನಸಿ ಶರ್ಮ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ, ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ, ಕನಕಪುರ ತಹಶೀಲ್ದಾರ್, ಬಿಡದಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ ಏನಿದೆ?: ‘ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿದ ಕಬ್ಬಾಳು ಗ್ರಾಮದ ಸರ್ಕಾರಿ ಕೆರೆಯಲ್ಲಿನ ಶೌಚಾಲಯ ನಿರ್ಮಾಣಕ್ಕೆ ಸಕ್ಷಮ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ. ಕೃಷಿಯೇತರ ಚಟುವಟಿಕೆಗೆ ಬಳಸಿಕೊಳ್ಳುವುದಕ್ಕೂ ಯಾವುದೇ ಸಾರ್ವಜನಿಕ ದಾಖಲೆಗಳಿಲ್ಲ. ಸರ್ವೆ ನಂಬರ್ 2ರಲ್ಲಿನ 1 ಎಕರೆ 15 ಗುಂಟೆ ‘ಸರ್ಕಾರಿ ಕಟ್ಟೆ’ (ಸರ್ಕಾರಿ ಕೆರೆ) ಜಾಗ ಎಂದು ಎಲ್ಲಾ ಕಂದಾಯ ದಾಖಲೆಗಳಲ್ಲಿ ನಮೂದು ಇದೆ. ಗ್ರಾಮದ ಕೃಷಿ ಚಟುವಟಿಕೆ ಮತ್ತು ಜನ-ಜಾನುವಾರುಗಳ ಬಳಕೆಗೆ ಇದೊಂದೇ ಮೂಲಾಧಾರ. ಶೌಚಾಲಯ ನಿರ್ಮಾಣದಿಂದ ಕೆರೆ, ನೀರಿನ ಮೂಲ ಹಾಗೂ ಪರಿಸರಕ್ಕೆ ದೊಡ್ಡ ಹಾನಿ ಉಂಟಾಗಲಿದೆ’ ಎಂದು ದೂರಲಾಗಿದೆ.

‘ಕೆರೆಯನ್ನು ಪುನಶ್ಚೇತನಗೊಳಿಸಿ ಅದರ ಮೂಲಸ್ಥಿತಿಗೆ ತರಲು ನಿರ್ದೇಶಿಸಬೇಕು ಎಂದು ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ‍ಪ್ರಯೋಜನವಾಗಿಲ್ಲ. ಆದ್ದರಿಂದ, ಕೆರೆ ನಿರ್ಮಾಣ ಮಾಡದಂತೆ ನಿರ್ಮಿತಿ ಕೇಂದ್ರಕ್ಕೆ ನಿರ್ದೇಶನ ನೀಡಬೇಕು. ಕೆರೆ ಜಾಗದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.