ADVERTISEMENT

ಮಕ್ಕಳನ್ನು ಶಾಲೆಗೆ ಕಳಿಸಲು ಆತಂಕ ಬೇಡ: ಸಚಿವ ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 5:59 IST
Last Updated 1 ಜನವರಿ 2021, 5:59 IST
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್   

ಬೆಂಗಳೂರು: 'ತರಗತಿ ನಡೆಸಲು ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಯಾವುದೇ ಆತಂಕ ಬೇಡ. ಆತಂಕ ಇರುವ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವುದೂ ಬೇಡ. ಆನ್ ಲೈನ್ ನಲ್ಲಿ ಪಾಠ ಕೇಳುವ ಅವಕಾಶವೂ ಇದೆ' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಶಾಲಾರಂಭದ ಮೊದಲ ದಿನವಾದ ಶುಕ್ರವಾರ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸರ್ಕಾರಿ ಶಾಲೆಗೆ ತೆರಳಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ಶಾಲೆಗಳು ಸುರಕ್ಷತಾ ಕೇಂದ್ರಗಳಂತಿವೆ. ಸೋಂಕು ಹರಡದಿರಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಶಿಕ್ಷಣದಷ್ಟೇ ಆರೋಗ್ಯವೂ ಮುಖ್ಯ. ಅದನ್ನು ಗಮನದಲ್ಲಿಟ್ಟುಕೊಂಡೇ ಶಾಲೆಗಳನ್ನು ಪುನರಾರಂಭಿಸಲಾಗಿದೆ' ಎಂದರು.

ADVERTISEMENT

'ಚೆನ್ನಾಗಿ ಓದಿ, ಧೈರ್ಯವಾಗಿ ಓದಿ. ಯಾವುದೇ ಭಯ ಇಟ್ಟುಕೊಳ್ಳಬೇಡಿ' ಎಂದು ಮಕ್ಕಳಿಗೆ ಸಲಹೆ ನೀಡಿದರು.
'ಜ್ವರ, ಕೆಮ್ಮು,ನೆಗಡಿ ಬಂದರೆ ಶಾಲೆಗೆ ಬರಬೇಡಿ. ಗುಣಮುಖರಾದ ನಂತರವೇ ಬನ್ನಿ' ಎಂದೂ ಹೇಳಿದರು.

ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಹಾಕಿಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಸುವ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಪೋಷಕರಿಂದ‌ ಒಪ್ಪಿಗೆ ಪತ್ರ ತಂದಿರುವ ಬಗ್ಗೆ ಖಾತ್ರಿ ಪಡಿಸಿಕೊಂಡರು.

ಪ್ರತಿ ಜಿಲ್ಲೆಯಲ್ಲಿ ವಿಚಕ್ಷಣ ದಳ

'ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಲು ಪ್ರತಿ ಜಿಲ್ಲೆಯಲ್ಲಿ ವಿಚಕ್ಷಣ ದಳ ರಚಿಸಲು ನಿರ್ಧರಿಸಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

'ಈ ತಂಡವು ಆಯಾ‌‌ ಜಿಲ್ಲಾ ವ್ಯಾಪ್ತಿಯ ಶಾಲೆಗಳಿಗೆ ಆಗಾಗ ಭೇಟಿ ನೀಡಿ ಪರಿಶೀಲಿಸಲಿದೆ‌. ಏನಾದರೂ ಕೊರತೆ, ಸಮಸ್ಯೆ ಇದ್ದಲ್ಲಿ ಅದನ್ನು ಸರಿಪಡಿಸುವ ಕೆಲಸವನ್ನೂ ಮಾಡಲಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.