ADVERTISEMENT

‘ಬೀದರ್‌ ಪಶು ವೈದ್ಯಕೀಯ ವಿ.ವಿಯಲ್ಲಿ ಅವ್ಯವಹಾರ’

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 20:13 IST
Last Updated 2 ಫೆಬ್ರುವರಿ 2021, 20:13 IST

ಬೆಂಗಳೂರು: ‘ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅವ್ಯವಹಾರ ನಡೆದಿರುವುದು ನಿಜ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ಜೆಡಿಎಸ್‌ನ ವೆಂಕಟರಾವ್‌ ನಾಡಗೌಡ ಅವರ ಗಮನ ಸೆಳೆಯುವ ಸೂಚನೆಗೆ ಈ ಭರವಸೆ ನೀಡಿದರು.

‘ಅವ್ಯವಹಾರಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳೂ ನನ್ನ ಬಳಿ ಇವೆ. ಕುಲಪತಿಯವರ ಬ್ಯಾಂಕ್‌ ಖಾತೆಯಲ್ಲಿ ₹ 6 ಕೋಟಿ ಹಣ ಇದೆ. ವಿಶ್ವವಿದ್ಯಾಲಯದ ಕಾರ್ಯಗಳಿಗಾಗಿ ಪರಿಶಿಷ್ಟರ ವರ್ಗದ ವಿಶೇಷ ನಿಧಿ ಹಣವನ್ನು ಅವರ ಖಾತೆಗೆ ಜಮೆ ಮಾಡಲು ಅವಕಾಶ ಕೊಟ್ಟವರು ಯಾರು’ ಎಂದು ನಾಡಗೌಡ ಪ್ರಶ್ನಿಸಿದರು.

ADVERTISEMENT

‘ಭ್ರಷ್ಟಾಚಾರ ಆಗಿರುವುದು ನಿಜವಾದರೆ, ತಕ್ಷಣವೇ ನಾಡಗೌಡ ಮತ್ತು ಅಧಿಕಾರಿಗಳ ಸಭೆಯನ್ನು ಕರೆದು ಮುಂದಿನ ಕ್ರಮದ ಬಗ್ಗೆ ಚರ್ಚಿಸಿ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಚಿವರಿಗೆ ಸಲಹೆ ನೀಡಿದರು. ಸಚಿವ ಈಶ್ವರಪ್ಪ ಅದಕ್ಕೆ ಒಪ್ಪಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.