ADVERTISEMENT

ಕೋವಿಡ್: 9 ದಿನಗಳಲ್ಲಿ 9.78 ಲಕ್ಷ ಮಂದಿಗೆ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 16:16 IST
Last Updated 9 ಜನವರಿ 2021, 16:16 IST

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನ ಅನುಸಾರ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಶನಿವಾರ ಒಂದೇ ದಿನ 1.24 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ತಿಂಗಳ 9 ದಿನಗಳಲ್ಲಿ 9.78 ಲಕ್ಷ ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ.

ರಾಜ್ಯದಲ್ಲಿ ಈವರೆಗೆ 1.51 ಕೋಟಿ ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಇದರಲ್ಲಿ 1.13 ಕೋಟಿ ಪರೀಕ್ಷೆಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ಮಾಡಲಾಗಿದೆ. ರಾಜ್ಯದಲ್ಲಿ ಹೊಸದಾಗಿ 899 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.26 ಲಕ್ಷ ದಾಟಿದೆ. ಸೋಂಕಿತರಲ್ಲಿ ಮತ್ತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,138ಕ್ಕೆ ತಲುಪಿದೆ.

ಕೋವಿಡ್ ಪೀಡಿತರಲ್ಲಿ ಮತ್ತೆ 872 ಮಂದಿ ಗುಣಮುಖರಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 9.05 ಲಕ್ಷಕ್ಕೆ ತಲುಪಿದೆ. ಸೋಂಕಿತರಲ್ಲಿ ಸದ್ಯ 202 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ರಾಜ್ಯಕ್ಕೆ ಬ್ರಿಟನ್‌ನಿಂದ ಬಂದವರಲ್ಲಿ ಈವರೆಗೆ 40 ಮಂದಿ ಸೋಂಕಿತರಾಗಿದ್ದಾರೆ. ಅವರ ಸಂಪರ್ಕ ಹೊಂದಿದ್ದವರಲ್ಲಿ 26 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ರೂಪಾಂತರಗೊಂಡ ಕೊರೊನಾ ವೈರಾಣು 11 ಮಂದಿಯಲ್ಲಿ ಕಾಣಿಸಿಕೊಂಡಿದೆ.

ADVERTISEMENT

ಬೆಂಗಳೂರಿನಲ್ಲಿ ಮತ್ತೆ 465 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.92 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 42 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 52,772ಕ್ಕೆ ತಲುಪಿದೆ. ಕೋಲಾರದಲ್ಲಿ 52, ದಕ್ಷಿಣ ಕನ್ನಡದಲ್ಲಿ 37, ಹಾಸನ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 31 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 3 ಹಾಗೂ ಮಂಡ್ಯದಲ್ಲಿ ಒಂದು ಮರಣ ಪ್ರಕರಣ ಹೊಸದಾಗಿ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.