ADVERTISEMENT

ಬ್ರಿಟನ್ ವಲಸಿಗರು: ಮತ್ತೆ ಮೂವರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 21:39 IST
Last Updated 14 ಫೆಬ್ರುವರಿ 2021, 21:39 IST

ಬೆಂಗಳೂರು: ಬ್ರಿಟನ್‌ನಿಂದ ಇಲ್ಲಿಗೆ ಬಂದವರಲ್ಲಿ ಮತ್ತೆ ಮೂವರು ಕೋವಿಡ್‌ ಪೀಡಿತರಾಗಿದ್ದಾರೆ. ಇದರಿಂದಾಗಿ ಅಲ್ಲಿಂದ ಬಂದವರಲ್ಲಿ ಸೋಂಕಿತರಾದವರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.

ಭಾನುವಾರ 270 ಮಂದಿ ಸೇರಿದಂತೆ ಕಳೆದ ನ.25ರಿಂದ ಬ್ರಿಟನ್‌ನಿಂದ ರಾಜ್ಯಕ್ಕೆ 10,782 ಮಂದಿ ಬಂದಿದ್ದಾರೆ. ಅವರಲ್ಲಿ ಈವರೆಗೆ 25 ಮಂದಿಯಲ್ಲಿ ರೂಪಾಂತರ ವೈರಾಣು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಹೊಸದಾಗಿ 414 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 9.45 ಲಕ್ಷ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಮಾತ್ರ ಮೃತಪಟ್ಟಿರುವುದು ದೃಢಪಟ್ಟಿದೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,265ಕ್ಕೆ ತಲುಪಿದೆ.

ಕೋವಿಡ್ ಪೀಡಿತರಲ್ಲಿ ಮತ್ತೆ 486 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.27 ಲಕ್ಷ ದಾಟಿದೆ. 5,836 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 132 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಒಂದೇ ದಿನ 60 ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.79 ಕೋಟಿ ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 241 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.02 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 21 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 53,783ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ 24, ತುಮಕೂರಿನಲ್ಲಿ 15, ಧಾರವಾಡದಲ್ಲಿ 14, ಉಡುಪಿಯಲ್ಲಿ 13, ಕಲಬುರ್ಗಿಯಲ್ಲಿ 12 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.