ADVERTISEMENT

ಲಾಕ್‌ಡೌನ್‌ ಪ್ರಸ್ತಾವ ಇಲ್ಲ: ಸಚಿವ ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 19:30 IST
Last Updated 17 ಫೆಬ್ರುವರಿ 2021, 19:30 IST
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್   

ಬೆಂಗಳೂರು: ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬರುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿಗೊಳಿಸುವ ಯಾವುದೇ ಪ್ರಸ್ತಾವ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕೇರಳದಿಂದ ಬರುತ್ತಿರುವವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್‌ ಸೋಂಕು ದೃಢಪಡುತ್ತಿದೆ. ಆದರೆ, ಯಾರೂ ಆತಂಕಪಡುವ ಅಗತ್ಯವಿಲ್ಲ. ಕೇರಳದಿಂದ ಬರುವ ಜನರ ಮೇಲೆ ವಿಶೇಷ ನಿಗಾ ಇಡಲಾಗುತ್ತಿದೆ. ಲಾಕ್‌ಡೌನ್‌ ಅಥವಾ ಸೀಲ್‌ಡೌನ್‌ನಂತಹ ಕ್ರಮಗಳು ಮುಂದೆ ಇರುವುದಿಲ್ಲ’ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯ ಸೋಂಕಿತರು ಇರುವ ಪ್ರದೇಶವನ್ನು ನಿರ್ಬಂಧಿತ ವಲಯ ಎಂದು ಘೋಷಿಸಲಾಗುತ್ತಿದೆ. ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಆಗಿದೆ. ಆದರೆ, ಕೋವಿಡ್‌ ಸಂಪೂರ್ಣವಾಗಿ ನಿರ್ಮೂಲನೆ ಆಗಿಲ್ಲ. ಜನರು ಎಚ್ಚರಿಕೆಯಿಂದ ಇರಲೇಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದೂ ಕಡ್ಡಾಯ ಎಂದು ಹೇಳಿದರು.

ADVERTISEMENT

ರಾಜ್ಯದಲ್ಲಿ ಆರನೇ ತರಗತಿ ಹಾಗೂ ಅದಕ್ಕಿಂತ ಮೇಲಿನ ತರಗತಿಗಳನ್ನು ಪುನರಾರಂಭ ಮಾಡಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕೈಗೊಂಡಿರುವ ಕ್ರಮ ಸರಿಯಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೋವಿಡ್‌ ನಿಯಂತ್ರಣ ಕಾರ್ಯಪಡೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಮತ್ತೆ ಸಭೆ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.