ADVERTISEMENT

ಕೋವಿಡ್‌ | ದುಬಾರಿ ಶುಲ್ಕ ವಿಧಿಸಿದರೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 15:54 IST
Last Updated 11 ಜೂನ್ 2025, 15:54 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಕೋವಿಡ್‌ ಪರೀಕ್ಷೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳು ಬಂದರೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಕೋವಿಡ್‌ ನಿಭಾಯಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಕೋವಿಡ್ ಪರಿಸ್ಥಿತಿ ಕುರಿತು ಬುಧವಾರ ನಡೆಸಿದ ಸಭೆಯಲ್ಲಿ ನಿರ್ದೇಶನ ನೀಡಿದರು.

ಕೋವಿಡ್‌ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್‌ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎಂದೂ ಸೂಚನೆ ನೀಡಿದರು.

ADVERTISEMENT

ಕೋವಿಡ್‌ ನಿಭಾಯಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ವಿವರ ನೀಡಿದ ಅಧಿಕಾರಿಗಳು, ರಾಜ್ಯದಲ್ಲಿ ಮೇ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದ್ದು, ಈಗ ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಕಳೆದ 10 ದಿನಗಳಲ್ಲಿ ಐದು ಸಾವಿರ ಪರೀಕ್ಷೆ ನಡೆಸಲಾಗಿದೆ. 862 ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11 ಮಂದಿ ಮೃತಟ್ಟಿದ್ದಾರೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್‌ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವು ಕಂಡಿದ್ದಾರೆ. ಒಂದು ಪ್ರಕರಣದ ಆಡಿಟ್‌ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌  ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.