ADVERTISEMENT

ಕೋವಿಡ್: ನಿಯಮಿತ ಪರೀಕ್ಷೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 16:41 IST
Last Updated 12 ಏಪ್ರಿಲ್ 2022, 16:41 IST
   

ಬೆಂಗಳೂರು: ಕೋವಿಡ್ ಸಕ್ರಿಯ ಪ್ರಕರಣಗಳ ಮೇಲೆ ನಿಗಾ ಇರಿಸಿ, ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ದೈನಂದಿನ ಕೋವೀಡ್ ಪ್ರಕರಣಗಳ ಸರಾಸರಿ ಸಂಖ್ಯೆ 200ರ ಆಸುಪಾಸಿನಲ್ಲಿದೆ. ಸೋಂಕು ದೃಢ ಪ್ರಮಾಣ ಶೇ 1ರ ಗಡಿಯೊಳಗಡೆ ಇದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ಸಕ್ರಿಯ ಪ್ರಕರಣಗಳ ಮೇಲೆ ನಿಯಮಿತವಾಗಿ ನಿಗಾ ಇಡಬೇಕು. ಪ್ರಕರಣಗಳು ಪತ್ತೆಯಾಗುತ್ತಿರುವ ಸ್ಥಳಗಳಲ್ಲಿ ಸೋಂಕು ಶಂಕಿತರ ಮಾದರಿಗಳನ್ನು ಪಡೆದು, ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲ್ಲೂಕು ಆಸ್ಪತ್ರೆಗಳು ಕೋವಿಡ್ ಪರೀಕ್ಷೆಗೆ ಮಾದರಿಗಳನ್ನು ಸಂಗ್ರಹಿಸಲು ಆದ್ಯತೆ ನೀಡಬೇಕು. ಪ್ರತಿನಿತ್ಯ 50 ಮತ್ತು 25 ಮಾದರಿಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ಪರೀಕ್ಷಿಸಬೇಕು. ಹೊಸರೂಪಾಂತರಿ ಪತ್ತೆ ಹಚ್ಚಲುವೈರಾಣು ಅನುಕ್ರಮಣಿಕೆ ಪರೀಕ್ಷೆಗೆ (ಜೀನೋಮ್‌ ಸೀಕ್ವೆನ್ಸಿಂಗ್‌) ಮಾದರಿಗಳನ್ನು ಕಳುಹಿಸಬೇಕು ಎಂದು ಹೇಳಲಾಗಿದೆ.

ಬಿಬಿಎಂಪಿ ಹಾಗೂ ಜಿಲ್ಲಾಡಳಿತ ನಿಗದಿಪಡಿಸಿದ ಕೋವಿಡ್ ಪರೀಕ್ಷೆಯ ದೈನಂದಿನ ಗುರಿ ತಲುಪಬೇಕು. ಕೋವಿಡ್‌ಗೆ ಸಂಬಂಧಿಸಿದ ದೈನಂದಿನ ಕ್ರೋಡೀಕೃತ ಮಾಹಿತಿಯನ್ನು ರಾಜ್ಯ ಕಣ್ಗಾವಲು ಘಟಕಕ್ಕೆ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.