ADVERTISEMENT

ಕರ್ನಾಟಕದಲ್ಲಿ ಕೋವಿಡ್‌ ಹೆಚ್ಚಳ; ಲಸಿಕಾಕರಣಕ್ಕೆ ವೇಗ ನೀಡಿ: ಕೇಂದ್ರ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 21:15 IST
Last Updated 6 ಆಗಸ್ಟ್ 2022, 21:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ.

ಕರ್ನಾಟಕ, ಕೇರಳ, ತಮಿಳುನಾಡು, ದೆಹಲಿ, ಮಹಾರಾಷ್ಟ್ರ, ಒಡಿಶಾ ಹಾಗೂ ತೆಲಂಗಾಣ ಸರ್ಕಾರಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌, ಕೋವಿಡ್‌ ಪ‍್ರಕರಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕೋವಿಡ್‌ ಲಸಿಕಾಕರಣಕ್ಕೆ
ಇನ್ನಷ್ಟು ವೇಗ ನೀಡಬೇಕು ಎಂದೂ ಹೇಳಿದ್ದಾರೆ.

ಮುಂಬರುವ→ತಿಂಗಳುಗಳಲ್ಲಿ ಹಬ್ಬಗಳ→ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜನರ ದಟ್ಟಣೆ ಹೆಚ್ಚಾಗಲಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಹಾಗೂ ಅಂತರ್‌ ರಾಜ್ಯ ಪ್ರವಾಸಗಳನ್ನು ಕೈಗೊಳ್ಳಲಿದ್ದಾರೆ. ಇದರಿಂದ ಸೋಂಕು ಪ್ರಸರಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಪತ್ರದಲ್ಲಿ ಎಚ್ಚರಿಸಿದ್ದಾರೆ.

ADVERTISEMENT

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್ ಅವರಿಗೆ ಬರೆದಿರುವ ಪತ್ರದಲ್ಲಿ, ‘ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ನಿತ್ಯ ಸರಾಸರಿ 1,355 ಪ್ರಕರಣಗಳು ದಾಖಲಾಗುತ್ತಿವೆ. ಆಗಸ್ಟ್‌ 5ರಂದು ಗರಿಷ್ಠ 1,992 ಪ್ರಕರಣಗಳು ಪತ್ತೆಯಾಗಿವೆ. ದೇಶದ ಒಟ್ಟು ಪ್ರಕರಣಗಳ ಪತ್ತೆ ಪ್ರಮಾಣದಲ್ಲಿ ರಾಜ್ಯದ ಪಾಲು ಶೇ 10ರಷ್ಟು ಇದೆ. ವಾರದ ಪಾಸಿಟಿವಿಟಿ ಪ್ರಮಾಣ ಶೇ 5.30ರಿಂದ ಶೇ 6.8ಕ್ಕೆ ಏರಿಕೆಯಾಗಿದೆ. ಹೀಗಾಗಿ, ಪ್ರಕರಣಗಳ ಬಗ್ಗೆ ನಿಗಾ ವಹಿಸಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.