ADVERTISEMENT

ಲಾಕ್‌ಡೌನ್‌ ಯಶಸ್ವಿಗೆ ಇನ್ನಷ್ಟು ಬಿಗಿ ಕ್ರಮ: ಗೃಹ ಸಚಿವ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 20 ಮೇ 2021, 6:46 IST
Last Updated 20 ಮೇ 2021, 6:46 IST
 ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಲಾಕ್‌ಡೌನ್‌ ನಿಯಮಗಳನ್ನು ಜನರು ಸರಿಯಾಗಿ ಪಾಲಿಸುತ್ತಿಲ್ಲ. ಹೀಗಾಗಿ, ನಿಯಮಗಳ ಜಾರಿಗೆ ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಬೈಕ್‌ನಲ್ಲಿ ಐದು ಜನ ತೆರಳುತ್ತಿದ್ದರು. ಹೀಗಾಗಿ, ವಾಹನಗಳನ್ನು ಜಪ್ತಿ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು’ ಎಂದರು.

‘ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು 3–4 ದಿನ ನಿರಂತರವಾಗಿ ಲಾಕ್‌ಡೌನ್‌ ಜಾರಿ ಮಾಡಿದ್ದಾರೆ. ಆದರೂ ಜನರು ಗಂಭೀರತೆ ಅರಿತು ಕೊಳ್ಳುತ್ತಿಲ್ಲ. ಲಾಕ್‌ಡೌನ್‌ಗೆ ಸಹಕಾರ ಕೊಡುತ್ತಿಲ್ಲ. ಲಾಕ್‌ಡೌನ್‌ ಯಾಕೆ ಜಾರಿ ಮಾಡಲಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

ADVERTISEMENT

‘ತೀವ್ರ ಆರ್ಥಿಕ ಸಂಕಷ್ಟದ ಮಧ್ಯೆಯೂ ಬಡಜನರಿಗಾಗಿ ಮುಖ್ಯಮಂತ್ರಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ‌ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕೆಂಬ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಎಲ್ಲ ವಿಷಯಗಳು ಮುಖ್ಯಮಂತ್ರಿಯ ಗಮನದಲ್ಲಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.