ADVERTISEMENT

ಓಮೈಕ್ರಾನ್‌ ಭೀತಿ: ವಿದೇಶದಿಂದ ಬಂದವರಿಗೆ ಏಳು ದಿನ ಕ್ವಾರಂಟೈನ್‌ ಎಂದ ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 9:59 IST
Last Updated 30 ನವೆಂಬರ್ 2021, 9:59 IST
ಡಾ.ಕೆ. ಸುಧಾಕರ್‌ (ಸಂಗ್ರಹ ಚಿತ್ರ)
ಡಾ.ಕೆ. ಸುಧಾಕರ್‌ (ಸಂಗ್ರಹ ಚಿತ್ರ)   

ಬೆಂಗಳೂರು: ವಿದೇಶಗಳಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಏಳು ದಿನಗಳ ಕ್ವಾರಂಟೈನ್‌ ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ತಜ್ಞರ ಸಮಿತಿ ಸದಸ್ಯರ ಜತೆ ಮಂಗಳವಾರ ಸರಣಿ ಸಭೆಗಳನ್ನು ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ಪ್ರಕಟಿಸಿದರು.

‘ವಿದೇಶಗಳಿಂದ ಬರುವ ಎಲ್ಲರಿಗೂ ತಕ್ಷಣವೇ ಆರ್‌ಟಿ–ಪಿಸಿಆರ್‌ ವಿಧಾನದಲ್ಲಿ ಕೋವಿಡ್‌ ಪರೀಕ್ಷೆ ನಡೆಸಲಾಗುವುದು. ಸೋಂಕಿನ ಲಕ್ಷಣ ಇರುವವರಿಗೆ ಐದನೇ ದಿನ ಮತ್ತೆ ಪರೀಕ್ಷೆ ನಡೆಸಲಾಗುವುದು. ಸೋಂಕಿನ ಲಕ್ಷಣಗಳಿಲ್ಲದವರಿಗೆ ಏಳನೇ ದಿನ ಎರಡನೇ ಬಾರಿಗೆ ಪರೀಕ್ಷೆ ನಡೆಸಲಾಗುವುದು. ಎಲ್ಲರಿಗೂ ಏಳು ದಿನಗಳ ಕ್ವಾರಂಟೈನ್‌ ಕಡ್ಡಾಯ’ ಎಂದರು.

ಕೋವಿಡ್‌ಗೆ ಏಕರೂಪದ ಚಿಕಿತ್ಸಾ ಕ್ರಮಗಳನ್ನು ಪಾಲಿಸುವ ಸಂಬಂಧ ಶಿಫಾರಸು ನೀಡಲು ಬೆಂಗಳೂರು ವೈದ್ಯಕೀಯ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ.ರವಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು. ಈ ಸಮಿತಿ ನೀಡುವ ಶಿಫಾರಸುಗಳನ್ನು ಆಧರಿಸಿ ಏಕರೂಪ ಚಿಕಿತ್ಸೆಯ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ಓಮೈಕ್ರಾನ್‌ ತಳಿಯ ಕೊರೊನಾ ವೈರಾಣು ಪತ್ತೆಯಾಗಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದರು.

ಪ್ರಯಾಣಿಕರ ಪ್ರವೇಶ ನಿರ್ಬಂಧಿಸಲು ಮನವಿ: ಕರ್ನಾಟಕದಲ್ಲಿ ಕೋವಿಡ್‌ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಕೆಲವು ರಾಜ್ಯಗಳಿಂದ ಜನರು ರಾಜ್ಯಕ್ಕೆ ಪ್ರವೇಶಿಸದಂತೆ ನಿರ್ಬಂಧ ಹೇರಲು ಕೇಂದ್ರ ಸರ್ಕಾರವನ್ನು ಕೋರಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.