ಬೆಂಗಳೂರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ಸೋಮವಾರ (ಜೂ.21) ಲಸಿಕಾ ಮೇಳವನ್ನು ಹಮ್ಮಿಕೊಂಡಿದ್ದು, ಒಂದೇ ದಿನ 11 ಲಕ್ಷ ಡೋಸ್ ಲಸಿಕೆ ವಿತರಿಸುವ ಗುರಿಯನ್ನು ಹಮ್ಮಿಕೊಂಡಿದೆ.
ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
‘ಲಸಿಕಾ ಮೇಳದಲ್ಲಿ 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಬೇಕು. ಅದೇ ರೀತಿ, ಎರಡನೇ ಡೋಸ್ ಪಡೆಯುವವರು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಯೋಧರಿಗೆ ಲಸಿಕೆ ಒದಗಿಸಬೇಕು. ಗುರುತಿಸಲಾದ 18 ರಿಂದ 44 ವರ್ಷದವರೆಗಿನ ದುರ್ಬಲ ಗುಂಪಿನ ಫಲಾನುಭವಿಗಳು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಬೇಕು. ಈ ಮೇಳವನ್ನು ಯಶಸ್ವಿಯಾಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ರಾಜ್ಯದಾಧ್ಯಂತ 5 ಸಾವಿರಕ್ಕೂ ಹೆಚ್ಚು ಲಸಿಕಾ ಕೇಂದ್ರಗಳಲ್ಲಿ ಮೇಳ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.