ADVERTISEMENT

ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 4:24 IST
Last Updated 25 ಜೂನ್ 2021, 4:24 IST

ಬೆಂಗಳೂರು: ರಾಜ್ಯದ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಹಾಗೂ ಬೆಂಬಲ ಸಿಬ್ಬಂದಿಗೆ ಲಸಿಕೆ ವಿತರಿಸಲು ಕ್ರಮವಹಿಸುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ.

‘ಜೂ.22ರಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ತಿಂಗಳಿನಿಂದ ಕಾಲೇಜುಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಅದಕ್ಕೂ ಮೊದಲು ಪದವಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೆಂಬಲ ಸಿಬ್ಬಂದಿಗೆ ಲಸಿಕೆ ಒದಗಿಸಲು ತೀರ್ಮಾನಿಸಲಾಗಿದೆ. ಹೀಗಾಗಿ, ಪ್ರತ್ಯೇಕ ಅಭಿಯಾನವನ್ನು ಏರ್ಪಡಿಸಿ, ಲಸಿಕೆ ವಿತರಿಸಲು ಮುಖ್ಯ ಕಾರ್ಯದರ್ಶಿಗಳು ಸೂಚಿಸಿದ್ದಾರೆ. ಆದ್ದರಿಂದ ಬಿಬಿಎಂಪಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಎಲ್ಲ ಪದವಿ ಕಾಲೇಜುಗಳ ಪಟ್ಟಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಪಡೆದು, ಕ್ರಮವಹಿಸಬೇಕು’ ಎಂದು ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

‘ಲಸಿಕೆ ವಿತರಣೆ ಸಿದ್ಧತೆಗೆ ಸಂಬಂಧಿಸಿದಂತೆ ಪ್ರತಿ ಕಾಲೇಜಿನ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸಂಖ್ಯೆಯನ್ನು ಆರೋಗ್ಯ ಇಲಾಖೆಗೆ ಒದಗಿಸಬೇಕು. ಕಾಲೇಜಿನ ಮುಖ್ಯಸ್ಥರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಬೇಕು. ಅವರು ಇಲಾಖೆಯ ಆರ್‌ಸಿಎಚ್ ಅಧಿಕಾರಿ ಜತೆಗೆ ಸಮನ್ವಯ ಸಾಧಿಸಬೇಕು. ಲಸಿಕೆಗಳ ಲಭ್ಯತೆ ಅನುಸಾರ ಕಾಲೇಜುಗಳ ಆವರಣದಲ್ಲಿಯೇ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಬೇಕು. ನೋಡಲ್ ಅಧಿಕಾರಿಗಳು ಫಲಾನುಭವಿಗಳಿಗೆ ಲಸಿಕೆ ವಿತರಣೆಯ ಬಗ್ಗೆ ಮಾಹಿತಿ ಒದಗಿಸಬೇಕು’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.