ಸಿದ್ದರಾಮಯ್ಯ ಮತ್ತು ಕಿರಣ್ ಮಂಜುದಾರ್ ಶಾ
ಬೆಂಗಳೂರು: ಹೃದಯಾಘಾತ ಹೆಚ್ಚುತ್ತಿರುವುದಕ್ಕೆ ಕೋವಿಡ್ ಲಸಿಕೆ ಕಾರಣವಿರಬಹುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿರುವ ಬಯೋಕಾನ್ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ‘ಇದು ವಾಸ್ತವಕ್ಕೆ ವಿರುದ್ಧವಾಗಿದ್ದು, ದಾರಿ ತಪ್ಪಿಸುವಂತಿದೆ’ ಎಂದಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್-19 ಲಸಿಕೆಗಳನ್ನು ತುರ್ತು ಬಳಕೆಗಾಗಿ ಅನುಮೋದಿಸಲಾಗಿತ್ತು. ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ವಿಷಯದಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸಲಾಗಿದೆ. ಈ ಲಸಿಕೆಗಳನ್ನು 'ತರಾತುರಿಯಲ್ಲಿ' ಅನುಮೋದಿಸಲಾಗಿದೆ ಎಂದು ಹೇಳುವುದು ವಾಸ್ತವಕ್ಕೆ ವಿರುದ್ಧವಾಗಿದ್ದು, ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ಕೊಡುತ್ತದೆ’ ಎಂದು ಹೇಳಿದ್ದಾರೆ.
‘ಕೋವಿಡ್ ಲಸಿಕೆ ಲಕ್ಷಾಂತರ ಜೀವಗಳನ್ನು ಉಳಿಸಿದೆ. ಎಲ್ಲಾ ಲಸಿಕೆಗಳಂತೆ ಇದರಲ್ಲಿಯೂ ಸಣ್ಣಪುಟ್ಟ ಅಡ್ಡಪರಿಣಾಮಗಳು ಇರಬಹುದು. ಲಸಿಕೆಯ ಬಗ್ಗೆ ಆರೋಪ ಮಾಡುವ ಬದಲು ಅವುಗಳ ಅಭಿವೃದ್ಧಿಯ ಹಿಂದಿನ ವಿಜ್ಞಾನವನ್ನು ಒಪ್ಪಿಕೊಳ್ಳಬೇಕು’ ಎಂದು ಹೇಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಾಯಘಾತದಿಂದ ಮೃತಪಟ್ಟ ಪ್ರಕರಣಗಳು ಹೆಚ್ಚುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸುತ್ತಾ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದರು. ಕೋವಿಡ್ ಲಸಿಕೆ ತರಾತುರಿಯಲ್ಲಿ ಅನುಮೋದನೆ ಕೊಟ್ಟು ಜನರಿಗೆ ಹಂಚಿದ್ದು ಹೃದಯಾಘಾತಕ್ಕೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.