ADVERTISEMENT

ಬೆಳೆ ಹಾನಿ ಸರ್ವೆ ಲೋಪ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಸದ ಬೊಮ್ಮಾಯಿ ಪತ್ರ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 15:31 IST
Last Updated 20 ನವೆಂಬರ್ 2025, 15:31 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಎರಡು ವರ್ಷಗಳಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿವೆ. ಬೆಳೆ ನಷ್ಟ ಸರ್ವೆಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಿ ಎಲ್ಲ ರೈತರಿಗೂ ಬೆಳೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ಮೆಕ್ಕೆಜೋಳ, ಸೋಯಾಬಿನ್‌, ಹೆಸರು, ಈರುಳ್ಳಿ ಬೆಳೆ ನಾಶವಾಗಿದೆ. ಕಳೆದ ವರ್ಷವೂ ನಷ್ಟವಾದ ಬೆಳೆಗೆ ಪರಿಹಾರ ಸಿಕ್ಕಿರುವುದಿಲ್ಲ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿರುವುದನ್ನು ಗಮನಿಸಿದ್ದೇನೆ. ಬೆಳೆ ನಷ್ಟ ಪರಿಹಾರ ಸರ್ವೆ ಕಾರ್ಯ ಸಮ್ಮತವಾಗಿ ನಡೆದಿಲ್ಲ. ಕೃಷಿ, ಕಂದಾಯ ಮತ್ತು ಸಾಂಖ್ಯಿಕ ಇಲಾಖೆ ಅಧಿಕಾರಿಗಳು ರೈತರ ಜಮೀನಿನಲ್ಲಿ ಪರೀಕ್ಷೆ ಮಾಡದೇ ಸರ್ಕಾರಕ್ಕೆ ವರದಿ ಸಲ್ಲಿಸಿರುತ್ತಾರೆ. ಇದರ ಪರಿಣಾಮ ಹಲವಾರು ತಾಲ್ಲೂಕುಗಳಲ್ಲಿ ಒಟ್ಟು ಬಿತ್ತನೆಯಾದ ಪ್ರದೇಶದ ಶೇ 10ರಷ್ಟು ಬೆಳೆ ನಾಶ ಆಗಿಲ್ಲ ಎನ್ನುವ ವರದಿ ಬಂದಿದೆ. ಇದು ಸತ್ಯಕ್ಕೆ ದೂರವಾಗಿದೆ. ಒಂದು ಉದಾಹರಣೆಯಂತೆ ಗದಗ ಜಿಲ್ಲೆಯ ಮುಂಡರಗಿ ವ್ಯಾಪ್ತಿಯಲ್ಲಿ ಸಾಕಷ್ಟು ಬೆಳೆ ನಷ್ಟವಾಗಿದ್ದರೂ ವರದಿಯಲ್ಲಿ ನಷ್ಟವಾಗಿಲ್ಲ ಎಂದಿದೆ’ ಎಂದು ವಿವರಿಸಿದ್ದಾರೆ. 

ಮೆಕ್ಕೆಜೋಳ ಖರೀದಿ ಆರಂಭಿಸಿ:

ರೈತರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಟನ್ ಮೆಕ್ಕೆಜೋಳ ಬೆಳೆದಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಬೆಲೆ ಕುಸಿದಿದ್ದು, ಪ್ರತಿ ಕ್ವಿಂಟಲ್‌ಗೆ ₹1,400ಗೆ ಇಳಿದಿದೆ. ಹಾಗಾಗಿ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ₹2,400 ಕನಿಷ್ಠ ಬೆಂಬಲ ಬೆಲೆ ನೀಡಿದೆ. ರಾಜ್ಯ ಸರ್ಕಾರ ಅದಕ್ಕಿಂತ ಹೆಚ್ಚಿನ ಬೆಲೆಗೆ ಖರೀದಿ ಮಾಡಬೇಕು. ತಕ್ಷಣ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.