ADVERTISEMENT

ಬೆಳೆ ನಷ್ಟ | ವರದಿ ಪಡೆದು ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 6:56 IST
Last Updated 17 ಸೆಪ್ಟೆಂಬರ್ 2025, 6:56 IST
   

ಕಲಬುರಗಿ: ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಹಲವೆಡೆ ಬೆಳೆ ಹಾನಿಯೂ ಆಗಿದೆ. ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ನೇತೃತ್ವದಲ್ಲಿ ಜಂಟಿ ಸಮಿತಿಗೆ ಆದೇಶ ನೀಡಲಾಗಿದೆ. ಶೀಘ್ರ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಪ್ರಾಥಮಿಕ ವರದಿ ನಮ್ಮ ಕೈಸೇರಿಲ್ಲ. ಮಳೆ ಸುರಿಯುತ್ತಿರುವುದರಿಂದ ಬೆಳೆ ಸಮೀಕ್ಷೆಗೆ ಹಿನ್ನಡೆಯಾಗಿದೆ. ವರದಿ ಬಂದ ಬಳಿಕ ಪರಿಹಾರ ಘೋಷಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಬೆಳೆ ನಷ್ಟ ಅಂದಾಜಿಸಿ ವಿಮಾ ಕಂಪನಿಗಳು ಪರಿಹಾರ ವಿತರಿಸಲಿವೆ ಎಂದರು.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ ಡಿಆರ್ ಎಫ್) ನಿಯಮಾವಳಿಗಳನ್ನು ಪರಿಷ್ಕರಿಸಿ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಯಾವ ಸ್ಪಂದನೆಯೂ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ರೈತರ ಸಾಲ ಮನ್ನಾ ಬೇಡಿಕೆ ಬಗ್ಗೆ ಗಮನ ಸೆಳೆದಾಗ 'ಪರಿಶೀಲಿಸಲಾಗುವುದು' ಎಂದರು.

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದ್ದು, ಇದಕ್ಕಾಗಿ 1.75 ಲಕ್ಷ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ ಎಂದರು.

ಹಿಂದೂ ಧರ್ಮದ ಒಳಪಂಗಡಗಳಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದವರನ್ನು ಸೇರ್ಪಡೆ ಮಾಡಿದ ಕುರಿತಂತೆ ಎದ್ದ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಕ್ರಿಶ್ಚಿಯನ್ನರು, ಮುಸ್ಲಿಮರು ಈ ದೇಶದವರಲ್ಲವೇ ಎಂದು ಪ್ರಶ್ನಿಸಿದರು.

ಪ್ರತಿ ಮನೆಗೆ ಹೋದಾಗ ಅವರು ಯಾವ ಜಾತಿ ಬರೆಸುತ್ತಾರೋ ಅದನ್ನು ದಾಖಲಿಸಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಎಸ್‌ಪಿಯೊಂದಿಗೆ ಮಾತಾಡಿದ್ದೇನೆ:

ವಿಜಯಪುರದ ಚಡಚಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿಯೊಂದಿಗೆ ಮಾತನಾಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.