
ಬೆಂಗಳೂರು: ‘ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಿಸುವುದಕ್ಕೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳ ವಿವರವನ್ನು (ಎಸ್‌ಒಪಿ) ಪ್ರಕರಣದ ಪಕ್ಷಕಾರರ ಜೊತೆ ವಿನಿಮಯ ಮಾಡಿಕೊಳ್ಳಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಘಟಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ ಅವರು, ‘ಎಸ್‌ಒಪಿ ಸಿದ್ಧವಾಗಿದ್ದು, ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲರು) ಎಸ್. ಸುಶೀಲಾ ಅವರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಇದರಲ್ಲಿ ಅಡಕಗೊಳಿಸಲಾಗುವುದು. ಅಂತೆಯೇ ಎಲ್ಲಾ ಪಕ್ಷಗಾರರಿಗೂ ಇದನ್ನು ವಿತರಿಸಲಾಗುವುದು ’ ಎಂದು ತಿಳಿಸಿದರು.
ಅಡ್ವೊಕೇಟ್ ಜನರಲ್ ಅವರ ಕೋರಿಕೆಯಂತೆ ಕಾಲಾವಕಾಶ ನೀಡಿ, ವಿಚಾರಣೆಯನ್ನು 2026ರ ಜನವರಿ 20ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.