ADVERTISEMENT

Bitcoin Scam | ಇನ್‌ಸ್ಪೆಕ್ಟರ್, ಸೈಬರ್ ತಜ್ಞನಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2024, 13:28 IST
Last Updated 23 ಫೆಬ್ರುವರಿ 2024, 13:28 IST
<div class="paragraphs"><p>ಸಂತೋಷ್ ಕುಮಾರ್, ಪ್ರಶಾಂತ್ ಬಾಬು</p></div>

ಸಂತೋಷ್ ಕುಮಾರ್, ಪ್ರಶಾಂತ್ ಬಾಬು

   

ಬೆಂಗಳೂರು: ಬಿಟ್‌ಕಾಯಿನ್ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿದ್ದ ಇನ್‌ಸ್ಪೆಕ್ಟರ್ ಡಿ.ಎಂ. ಪ್ರಶಾಂತ್‌ ಬಾಬು ಹಾಗೂ ಸೈಬರ್ ತಜ್ಞ ಕೆ.ಎಸ್. ಸಂತೋಷ್‌ಕುಮಾರ್ ಅವರಿಗೆ ಜಾಮೀನು ಮಂಜೂರಾಗಿದೆ.

ಸಾಕ್ಷ್ಯ ನಾಶ ಆರೋಪದಡಿ ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು, ಪ್ರಶಾಂತ್ ಬಾಬು ಹಾಗೂ ಸಂತೋಷ್‌ ಅವರನ್ನು ಜ. 25ರಂದು ಬಂಧಿಸಿದ್ದರು.

ADVERTISEMENT

ನಂತರ, ಆರು ದಿನ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ, ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಅಂದಿನಿಂದ ಇಬ್ಬರೂ ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಸಂತೋಷ್‌ಕುಮಾರ್ ಹಾಗೂ ಪ್ರಶಾಂತ್ ಬಾಬು ಪರ ವಕೀಲರಾದ ಶ್ಯಾಮಸುಂದರ್ ಹಾಗೂ ಸುಧನ್ವ ಡಿ.ಎಸ್ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 52ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಯಶವಂತಕುಮಾರ್, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಇಬ್ಬರೂ ಆರೋಪಿಗಳು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಸೋಮವಾರ ಬಿಡುಗಡೆ ಆಗುವ ಸಾಧ್ಯತೆ ಇದೆ.

ಡಿವೈಎಸ್ಪಿ ಶ್ರೀಧರ್ ಪೂಜಾರ ಅರ್ಜಿ ತಿರಸ್ಕೃತ

ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿ ಆಗಿರುವ ಡಿವೈಎಸ್ಪಿ ಶ್ರೀಧರ್ ಪೂಜಾರ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ‘ಅಂತರರಾಷ್ಟ್ರೀಯ ಹ್ಯಾಕರ್ ಎನ್ನಲಾದ ಶ್ರೀಕೃಷ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖಾಧಿಕಾರಿಯೂ ಆಗಿದ್ದ ಸಿಸಿಬಿಯ ಅಂದಿನ ಇನ್‌ಸ್ಪೆಕ್ಟರ್ ಶ್ರೀಧರ್ ಪೂಜಾರ (ಸದ್ಯ ಡಿವೈಎಸ್ಪಿ) ಸಾಕ್ಷ್ಯ ನಾಶ ಮಾಡಿದ್ದ ಸಂಗತಿ ಎಸ್‌ಐಟಿ ತನಿಖೆಯಿಂದ ಗೊತ್ತಾಗಿತ್ತು. ಇದೇ ಕಾರಣಕ್ಕೆ ಶ್ರೀಧರ್ ವಿರುದ್ಧವೂ ಎಫ್‌ಐಆರ್ ದಾಖಲಾಗಿತ್ತು. ಎಸ್‌ಐಟಿ ವಿಚಾರಣೆಗೂ ಅವರು ಹಾಜರಾಗುತ್ತಿದ್ದರು. ಬಂಧನ ಭೀತಿಯಲ್ಲಿದ್ದ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.