ADVERTISEMENT

ಚುನಾವಣಾ ಅಕ್ರಮ ನಡೆಸಿ 9 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 15:57 IST
Last Updated 25 ಜುಲೈ 2025, 15:57 IST
ಸಿ.ಟಿ.ರವಿ
ಸಿ.ಟಿ.ರವಿ   

ನವದೆಹಲಿ: ‘2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಚುನಾವಣಾ ಅಕ್ರಮ ನಡೆಸಿ ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಅನುಮಾನ ಇದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು. 

ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘2019ರ ಚುನಾವಣೆಯಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿಕೂಟ ಮಾಡಿಕೊಂಡು ಸ್ಪರ್ಧಿಸಿದಾಗ ಈ ಪಕ್ಷಗಳು ಒಂದೊಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದವು. 2024ರ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಿತ್ತು. ಹಾಗಿದ್ದರೂ 9ರಲ್ಲಿ ಗೆದ್ದಿದ್ದು ಹೇಗೆ? ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ಗೆದ್ದಿದ್ದು ಹೇಗೆ’ ಎಂದು ಅವರು ಪ್ರಶ್ನಿಸಿದರು. 

‘ಭಾರತೀಯ ಚುನಾವಣಾ ಆಯೋಗಕ್ಕೆ ಅದರದ್ದೇ ಆದ ಅಧಿಕಾರಿಗಳ ಜಾಲ ಇರುವುದಿಲ್ಲ. ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಕರನ್ನು ಬಳಸಿಕೊಂಡು ಚುನಾವಣೆ ನಡೆಸುತ್ತದೆ. 2024ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಅಧಿಕಾರಿಗಳನ್ನು ಕಾಂಗ್ರೆಸ್‌ ಸರ್ಕಾರ ದುರ್ಬಳಕೆ ಮಾಡಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಸಾಧ್ಯತೆ ಇದೆ’ ಎಂದು ಅವರು ಅನುಮಾನ ವ್ಯಕ್ತಪಡಿಸಿದರು. 

ADVERTISEMENT

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಕನಿಷ್ಠ 4 ಲಕ್ಷ ಮತಗಳ ಅಂತರದಿಂದ ಗೆಲ್ಲಬೇಕಿತ್ತು. ಇಲ್ಲಿ ಕಾಂಗ್ರೆಸ್‌ ಸರ್ಕಾರ ಅಕ್ರಮ ನಡೆಸಿದ್ದರಿಂದ ಗೆಲುವಿನ ಅಂತರ 2 ಲಕ್ಷಕ್ಕೆ ಇಳಿಯಿತು. ಮೈಸೂರಿನಲ್ಲೂ 3.75 ಲಕ್ಷ ಮತಗಳ ಅಂತರದಿಂದ ಗೆಲ್ಲಬೇಕಿತ್ತು ಎಂದರು. 

‘ಚಿಕ್ಕಮಗಳೂರು ಕ್ಷೇತ್ರದಲ್ಲಿ ₹5 ಸಾವಿರ ಕೋಟಿ ಕಾಮಗಾರಿ ಮಾಡಿಸಿದ್ದೆ. ಕ್ಷೇತ್ರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿದ್ದೆ. ನನ್ನನ್ನು ಸೋಲಿಸಲು ಸಾಧ್ಯವೇ ಇಲ್ಲ ಎಂದು ಜನರು ಹೇಳುತ್ತಿದ್ದರು. ಕಾಂಗ್ರೆಸ್‌ ಮಾಡಿರುವ ಅಕ್ರಮದಿಂದ ನಾನು ಸೋತಿರುವ ಸಾಧ್ಯತೆ ಇದೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.