ಸಿ.ಟಿ.ರವಿ ಮತ್ತು ಲಕ್ಷ್ಮಿ ಹೆಬ್ಬಾಳಕರ
ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ 'ಎಕ್ಸ್'ನಲ್ಲಿ ಹಾರೈಸಿದ್ದಾರೆ.
ಸಿಎಲ್‌ಪಿ ಸಭೆ ಮುಗಿಸಿ ಬೆಳಗಾವಿಗೆ ಹಿಂದಿರುಗುತ್ತಿದ್ದ ವೇಳೆ ಲಕ್ಷ್ಮಿ ಹೆಬ್ಬಾಳಕರ ಅವರ ಕಾರು ಅಪಘಾತಕ್ಕೀಡಾಗಿತ್ತು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಕಾರಿಗೆ ನಾಯಿ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಕಾರು ಚಾಲಕ ಎಡಕ್ಕೆ ತಿರುಗಿಸಿದ್ದಾರೆ. ಈ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿತ್ತು.
ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳಕರ ಅವರ ಬೆನ್ನು ಮೂಳೆ ಸೀಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
‘ಕಿತ್ತೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ, ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ’ ಎಂದು ಸಿ.ಟಿ.ರವಿ ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ಡಿಸೆಂಬರಿನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಕಲಾಪದಲ್ಲೇ ತಮಗೆ 'ಅವಾಚ್ಯ' ಪದ ಬಳಸಿ ಮಾನಭಂಗ ಮಾಡಿದ್ದಾರೆ ಎಂದು ಆರೋಪಿಸಿ ಲಕ್ಷ್ಮೀ ಹೆಬ್ಬಾಳಕರ ಅವರು ರವಿ ವಿರುದ್ಧ ದೂರು ದಾಖಲಿಸಿದ್ದಾರೆ.
ಈ ಜಟಾಪಟಿ ದೊಡ್ಡ ಸುದ್ದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.