ADVERTISEMENT

ಪಕ್ಷದ ಮುಂದಿನ ಹೋರಾಟ ಸಿಡಬ್ಲ್ಯುಸಿ ತೀರ್ಮಾನ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2024, 16:02 IST
Last Updated 21 ಡಿಸೆಂಬರ್ 2024, 16:02 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಡಾ.ಎಂ.ಸಿ. ಸುಧಾಕರ್‌ ಸೇರಿದಂತೆ ಸಚಿವರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಡಾ.ಎಂ.ಸಿ. ಸುಧಾಕರ್‌ ಸೇರಿದಂತೆ ಸಚಿವರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದರು   

ಬೆಂಗಳೂರು: ‘ಮುಂದಿನ ದಿನಗಳಲ್ಲಿ ಪಕ್ಷ ರೂಪಿಸಬೇಕಾದ ಹೋರಾಟದ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ( ಸಿಡಬ್ಲ್ಯುಸಿ) ತೀರ್ಮಾನ ಮಾಡಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಪಕ್ಷದ ಮುಖಂಡರ ಜೊತೆ ಶನಿವಾರ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್, ‘ಶತಮಾನೋತ್ಸವ ಆಚರಣೆ ಅಂಗವಾಗಿ ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು‌ ಸಭೆ ನಡೆಸಿದ್ದೇವೆ. ಸುವರ್ಣಸೌಧದ ಆವರಣದಲ್ಲಿ 27ರಂದು ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲ ಶಾಸಕರಿಗೂ ಆಹ್ವಾನ ನೀಡುತ್ತೇವೆ’ ಎಂದರು.

ADVERTISEMENT

‘26ರಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಲ್ಲ ಪದಾಧಿಕಾರಿಗಳು, 150 ಸಂಸದರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. 27ರಂದು ಬೆಳಿಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಅನೇಕ ರಾಷ್ಟ್ರೀಯ ನಾಯಕರು ಮಾತನಾಡಲಿದ್ದಾರೆ’ ಎಂದು ಹೇಳಿದರು.

‘ಗಾಂಧೀಜಿ ಅವರ ಪ್ರತಿಮೆಯನ್ನು ಸುವರ್ಣ ವಿಧಾನಸೌಧದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅನಾವರಣ ಮಾಡಲಿದ್ದಾರೆ. ಸ್ಪೀಕರ್, ಸಭಾಪತಿ, ವಿರೋಧ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇವಲ ಶಾಸಕರು, ಸಂಸದರು ಹಾಗೂ ಅತಿಥಿಗಳಿಗೆ ಮಾತ್ರ ಅವಕಾಶವಿದ್ದು, ಭದ್ರತೆ ಕಾರಣಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.