ADVERTISEMENT

‘ಫೆಂಜಲ್’ ಚಂಡಮಾರುತ: ಆರು ಜಿಲ್ಲೆಗೆ ಯೆಲ್ಲೊ ಅಲರ್ಟ್‌

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2024, 15:56 IST
Last Updated 2 ಡಿಸೆಂಬರ್ 2024, 15:56 IST
ಮಳೆ
ಮಳೆ   

ಬೆಂಗಳೂರು: ‘ಫೆಂಜಲ್’ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿರುವುದರಿಂದ ಮಂಗಳವಾರ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಕೆಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ADVERTISEMENT

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವವಿದೆ.

ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ.ಗಳಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವ ಇದೆ. ಕೆಲವೊಮ್ಮೆ ಭಾರಿ ಮಳೆ ಸಾಧ್ಯತೆ ಇದೆ. ಬೆಳಗಿನ ಜಾವ ಮಂಜು ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಚಾಮರಾಜನಗರದಲ್ಲಿ 5 ಸೆಂ.ಮೀ, ಬಂಡೀಪುರದಲ್ಲಿ 4 ಸೆಂ.ಮೀ, ಕೋಲಾರ ಜಿಲ್ಲೆಯ ರಾಯಲ್ಪಾಡಿನಲ್ಲಿ 4 ಸೆಂ.ಮೀ ಮಳೆಯಾಗಿದೆ.

ಫೆಂಜಲ್ ಚಂಡಮಾರುತದ ಕಾರಣ ಬೆಂಗಳೂರು ನಗರದಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದ ವಿಪರೀತ ಚಳಿಯ ವಾತಾವರಣ ಉಂಟಾಗಿದೆ. ತೇವಾಂಶಯುಕ್ತ ಗಾಳಿ ಮತ್ತು ಮಳೆಯಿಂದ ದಿನವಿಡೀ ಚಳಿಯ ಅನುಭವವಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.